ಔರಾದ್ ಮಹಾಯೋಜನೆಗೆ ಅನುಮೋದನೆ

prabhu chouhan
Published on

ಔರಾದ್: ಔರಾದ್ ಪಟ್ಟಣದ ಸ್ಥಳೀಯ ಯೋಜನಾ ಪ್ರದೇಶದ ಮಹಾಯೋಜನೆ (ಮಾಸ್ಟರ್ ಪ್ಲ್ಯಾನ್)ಗೆ ಸರ್ಕಾರ ಅನುಮೋದನೆ ನೀಡಿದೆ ಎಂದು ಶಾಸಕ ಪ್ರಭು ಚವ್ಹಾಣ್ ತಿಳಿಸಿದ್ದಾರೆ.

ಪಟ್ಟಣವನ್ನು ಯೋಜನಾಬದ್ಧವಾಗಿ ಸಮಗ್ರ ಅಭಿವೃದ್ಧಿಪಡಿಸುವ ಸಂಕಲ್ಪದೊಂದಿಗೆ ಕೆಲಸ ಮಾಡುತ್ತಿದ್ದು, ಮಾಸ್ಟರ್ ಪ್ಲ್ಯಾನ್ ತಯಾರಿಸಿ ಸರ್ಕಾರದ ಅನುಮೋದನೆಗೆ ಕಳುಹಿಸಲಾಗಿತ್ತು. ನಂತರ ಸಚಿವರು ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಇದೀಗ ಅನುಮೋದನೆ ಪಡೆಯುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಹೇಳಿದ್ದಾರೆ.

ಪಟ್ಟಣದ ಜನಸಂಖ್ಯೆ 2031ರಲ್ಲಿ 30 ಸಾವಿರಕ್ಕೆ ಹೆಚ್ಚಳ ಅಂದಾಜಿಸಿ ಮಹಾಯೋಜನೆ ತಯಾರಿಸಿದ್ದು, ಅನುಷ್ಠಾನಕ್ಕೆ ತರಲು ಅಗತ್ಯವಿರುವ ವಲಯ ನಿಯಮಾವಳಿಗಳನ್ನು ರೂಪಿಸಲಾಗಿದೆ. ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಕಲಂ 13(3)ರನ್ವಯ ಅಂತಿಮ ಅನುಮೋದನೆಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು ಎಂದಿದ್ದಾರೆ.

ನಾನು ಶಾಸಕನಾದ ನಂತರ ಪಟ್ಟಣದ ಸಮಗ್ರ ಅಭಿವೃದ್ಧಿಗೆ ನಿರಂತರ ಶ್ರಮಿಸುತ್ತಿದ್ದೇನೆ. ರಸ್ತೆ, ಚರಂಡಿ, ಬೀದಿ ದೀಪ ಸೇರಿ ಅಗತ್ಯ ಮೂಲಸೌಕರ್ಯ ಒದಗಿಸುವ ಕೆಲಸ ಮಾಡುತ್ತಿದ್ದೇನೆ. ಬಹುದಿನದ ಬೇಡಿಕೆಯಾದ ಮಾಸ್ಟರ್ ಪ್ಲ್ಯಾನ್ಗೆ ಸರ್ಕಾರ ಅನುಮೋದನೆ ನೀಡಿದ್ದರಿಂದ ಯೋಜನಾಬದ್ಧವಾಗಿ ಅಭಿವೃದ್ಧಿಪಡಿಸಲು ನೆರವಾಗಲಿದೆ ಎಂದು ಹೇಳಿದ್ದಾರೆ.

ಔರಾದ್ ಪಟ್ಟಣ ಪಂಚಾಯಿತಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ಸರ್ಕಾರದ ಹಂತದಲ್ಲಿದೆ. ಪಟ್ಟಣದಲ್ಲಿ ಉತ್ತಮ ರಿಂಗ್ ರೋಡ್ ನಿರ್ಮಿಸುವ ಬಗ್ಗೆ ಯೋಜಿಸಿ ನಾನಾ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಸುಸಜ್ಜಿತವಾದ ಪಟ್ಟಣ ಪಂಚಾಯಿತಿ ಕಟ್ಟಡ ಉದ್ಘಾಟಿಸಲಾಗಿದೆ. ಉದ್ಯಾನವನ (ಟ್ರೀ ಪಾಕ್೯) ಕೆಲಸಕ್ಕೆ ಚಾಲನೆ ನೀಡಲಾಗಿದೆ. ಮುಖ್ಯ ರಸ್ತೆಯಲ್ಲಿ ಬೀದಿ ದೀಪಗಳನ್ನು ಅಳವಡಿಸಲಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಲು ಶಾಲಾ-ಕಾಲೇಜುಗಳ ಮಂಜೂರು ಮಾಡಿಸಲಾಗಿದೆ. ಐಟಿಐ, ಡಿಪ್ಲೊಮಾ ಕಾಲೇಜು ಕಟ್ಟಡ, ಹೊರಾಂಗಣ ಮತ್ತು ಒಳಾಂಗಣ ಕ್ರೀಡಾಂಗಣ ನಿರ್ಮಿಸಲಾಗಿದೆ. ಕಾರಂಜಾ ಜಲಾಶಯದಿಂದ ಔರಾದ್ಗೆ ಪೈಪ್ ಲೈನ್ ಮುಖಾಂತರ ನೀರು ಪೂರೈಸುವ 84 ಕೋಟಿ ಯೋಜನೆ ಮಂಜೂರು ಮಾಡಿಸಲಾಗಿದೆ. ಟೆಂಡರ್ ಆಗಿದ್ದು, ಶೀಘ್ರದಲ್ಲೇ ಕೆಲಸ ಆರಂಭವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net