ಸಾಮಾಜಿಕ ನ್ಯಾಯಕೊಟ್ಟ ಅಂಬೇಡ್ಕರ್ ದೇವರಿಗೆ ಸಮ

Sagar Khandre
Published on

ಬೀದರ್: ಸಂವಿಧಾನದ ಮೂಲಕ ವಂಚಿತರು, ಶೋಷಿತರಿಗೆ ಸಾಮಾಜಿಕ ನ್ಯಾಯ ಕಲ್ಪಿಸಿದ ಡಾ.ಬಾಬಾಸಾಹೇಬ್ ಅಂಬೇಡ್ಕರ್ ದೇವರಿಗೆ ಸರಿಸಮಾನರಾಗಿದ್ದು, ಅವರ ಜಪ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಸಂಸದ ಸಾಗರ್ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.

ಶತಮಾನಗಳಿಂದ ಅಸ್ಪೃಶ್ಯತೆಯ ನೋವುಂಡು, ಶಿಕ್ಷಣ, ಆರೋಗ್ಯ, ಉದ್ಯೋಗ ಮತ್ತಿತರ ಮೂಲಸೌಲಭ್ಯಗಳಿಂದ ವಂಚಿತರಾಗಿ ಚಾತುರ್ವರ್ಣಾಶ್ರಮ ವ್ಯವಸ್ಥೆಯಲ್ಲಿ ನೊಂದು ಬೆಂದವರಿಗೆ ಸಾಮಾಜಿಕ ನ್ಯಾಯ ಕೊಟ್ಟ ಪುಣ್ಯ ಪುರುಷನಿಗೆ ಅವಮಾನ ಮಾಡಿರುವ ಗೃಹ ಸಚಿವ ಅಮಿತ್ ಷಾ ಅವರಿಗೆ ಸಂಪುಟದಲ್ಲಿ ಮುಂದುವರಿಯುವ ನೈತಿಕತೆ ಇಲ್ಲ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ಸಚಿವ ಷಾ ಮಾತನಾಡುವ ವೇಳೆ ಅಂಬೇಡ್ಕರ್ ಅಂಬೇಡ್ಕರ್ ಅಂಬೇಡ್ಕರ್ ಅನ್ನೋದು ಈಗ ಕೆಲವರಿಗೆ ಫ್ಯಾಶನ್ ಆಗಿದೆ. ಇಷ್ಟು ಬಾರಿ ದೇವರ ನಾಮ ಜಪಿಸಿದ್ದರೆ ಏಳು ಜನ್ಮದವರೆಗೆ ಸ್ವರ್ಗ ಪ್ರಾಪ್ತಿಯಾಗುತ್ತದೆ ಎನ್ನುವ ಮೂಲಕ ಅಂಬೇಡ್ಕರ್ ಮತ್ತು ಅವರ ಅಭಿಮಾನಿಗಳಿಗೆ ನೋವುಂಟು ಮಾಡಿದ್ದಾರೆ. ಈ ಮಾತುಗಳು ಷಾ ಮನದಾಳದಿಂದ ಬಂದಿದ್ದು, ಬಿಜೆಪಿ ಮನಸ್ಥಿತಿಯನ್ನು ತೋರಿಸಿಕೊಡುತ್ತದೆ ಎಂದು ಕಿಡಿಕಾರಿದ್ದಾರೆ.

ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಅಮಿತ್ ಷಾ ತಕ್ಷಣವೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅಸಭ್ಯ ಹೇಳಿಕೆಗಾಗಿ ದೇಶದ ಮುಂದೆ ಬಹಿರಂಗವಾಗಿ ಬೇಷರತ್ ಕ್ಷಮೆಯಾಚಿಸಬೇಕು ಎಂದು ಖಂಡ್ರೆ ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net