

ಬೀದರ್: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ರಾಜಕೀಯ ಲಾಭಕ್ಕಾಗಿ ಬಿಜೆಪಿಯವರು ಸಚಿವ ಪ್ರಿಯಾಂಕ್ ಖರ್ಗೆ ಹೆಸರು ಕೆಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕಲಬುರಗಿ-ಬೀದರ್-ಯಾದಗಿರಿ ಹಾಲು ಒಕ್ಕೂಟದ ನಿರ್ದೇಶಕರೂ ಆದ ಗೊಂಡ ಸಮಾಜದ ಮುಖಂಡ ಮಲ್ಲಿಕಾರ್ಜುನ ಬಿರಾದಾರ ಆರೋಪಿಸಿದ್ದಾರೆ.
ಆತ್ಮಹತ್ಯೆ ಪ್ರಕರಣದಲ್ಲಿ ಸಚಿವರ ಯಾವುದೇ ಪಾತ್ರವಿಲ್ಲ. ಡೆತ್‍ನೋಟ್‍ನಲ್ಲಿ ಅವರ ಹೆಸರು ಕೂಡ ಇಲ್ಲ. ಆದರೂ, ಬಿಜೆಪಿ ನಾಯಕರು ಅವರ ವಿರುದ್ಧ ಅಪಪ್ರಚಾರ ನಡೆಸುತ್ತಿರುವುದು ಹಾಗೂ ರಾಜೀನಾಮೆಗೆ ಒತ್ತಾಯಿಸುತ್ತಿರುವುದು ಕ್ಷುಲ್ಲಕ ರಾಜಕೀಯ ಎಂದು ಟೀಕಿಸಿದ್ದಾರೆ.
ಪ್ರಿಯಾಂಕ್ ಖರ್ಗೆ ಅವರೇ ಮುಖ್ಯಮಂತ್ರಿಗೆ ಪತ್ರ ಬರೆದು ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಕೋರಿದ್ದರು. ಈಗಾಗಲೇ ಪ್ರಕರಣದ ಸಿಐಡಿ ತನಿಖೆ ನಡೆಯುತ್ತಿದೆ. ಆದರೆ, ಬಿಜೆಪಿಯರು ಸುಖಾ ಸುಮ್ಮನೆ ಗುಲ್ಲೆಬ್ಬಿಸುತ್ತಿದ್ದಾರೆ ಎಂದು ಆಪಾದಿಸಿದ್ದಾರೆ. ಪ್ರಿಯಾಂಕ್ ಖರ್ಗೆ ಅವರು ಪ್ರಭಾವಿ ರಾಜಕಾರಣಿಯಾಗಿ ಹೊರ ಹೊಮ್ಮಿದ್ದಾರೆ. ಸಚಿವರಾಗಿ ಉತ್ತಮ ಕೆಲಸ ಮಾಡಿ ಜನ ಮೆಚ್ಚುಗೆ ಗಳಿಸಿದ್ದಾರೆ. ಸಚಿನ್ ಪ್ರಕರಣದಲ್ಲಿ ಅವರ ಹೆಸರು ಎಳೆದು ತಂದಿರುವುದು ಅವರ ವರ್ಚಸ್ಸು ಕುಗ್ಗಿಸುವ ಷಡ್ಯಂತ್ರವಾಗಿದೆ ಎಂದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಒಳ್ಳೆಯ ಆಡಳಿತ ನೀಡುತ್ತಿದೆ. ಬಿಜೆಪಿಯವರಿಗೆ ಸರ್ಕಾರ ಅಥವಾ ಸಚಿವರ ಬಗ್ಗೆ ಮಾತನಾಡಲು ಯಾವುದೇ ವಿಷಯಗಳಿಲ್ಲ. ಜನರ ದೃಷ್ಟಿ ಬೇರೆಡೆ ಸೆಳೆಯಲು ಆತ್ಮಹತ್ಯೆ ಪ್ರಕರಣ ಬಳಸಿಕೊಳ್ಳಲು ಹೊರಟಿದ್ದಾರೆ. ಆದರೆ, ಜನ ಪ್ರಜ್ಞಾವಂತರಿದ್ದಾರೆ ಎನ್ನುವುದನ್ನು ಬಿಜೆಪಿಯವರು ಅರಿಯಬೇಕು ಎಂದು ಹೇಳಿದ್ದಾರೆ.