

ಬೀದರ್: ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರ ನೇಮಕದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಯುವ ಕ್ರಾಂತಿ ಸಂಘಟನೆ ಜಿಲ್ಲಾಧ್ಯಕ್ಷ ಸಂಗಮೇಶ ಭೂರೆ ಆಗ್ರಹಿಸಿದರು.
ಕಮಲನಗರ ತಾಲೂಕಿನ ನೇಮಕಾತಿಯಲ್ಲಿ ಸಂಪೂರ್ಣವಾಗಿ ಅವ್ಯವಹಾರ ಆಗಿದೆ. ಕಡಿಮೆ ಅಂಕ ಪಡೆದವರನ್ನು ಸಹ ಹಣ ಪಡೆದು ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಸೇರಿಸಿದ್ದಾರೆ. ಇಂಥ ಹಲವು ಉದಾಹರಣೆಗಳಿವೆ ಎಂದು ಸುದ್ದಿಗೋಷ್ಠಿಯಲ್ಲಿ ದೂರಿದರು.
ದುಡ್ಡು ಕೊಟ್ಟವರಿಗೆ ಮಾತ್ರ ನೇಮಕಾತಿ ಮಾಡಿಕೊಳ್ಳಲಾಗಿದೆ. ಜಿಲ್ಲೆಯ ಸೋನಾಳವಾಡಿ ಗ್ರಾಮದ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಹುದ್ದೆಗೆ ಕಡಿಮೆ ಅಂಕ ಪಡೆದವರನ್ನು ಹಣ ಪಡೆದು ಆಯ್ಕೆ ಮಾಡಲಾಗಿದೆ. ಸರ್ಕಾರದ ನಿಯಮಗಳನ್ನು ಪಾಲಿಸಿಲ್ಲ. ಸಂಪೂರ್ಣವಾಗಿ ಅಕ್ರಮವಾಗಿದೆ. ಈ ಬಗ್ಗೆ ತನಿಖೆ ನಡೆಸಿ ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
ಜಿಲ್ಲಾಧಿಕಾರಿಗಳ ಈ ಬಗ್ಗೆ ಪರಿಶೀಲಿಸಿ ಶೀಘ್ರದಲ್ಲಿ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು. ನಿರ್ಲಕ್ಷ್ಯ ಮಾಡಿದರೆ ಜಿಲ್ಲಾಧಿಕಾರಿ ಕಚೇರಿ ಎದರು ಅಹೋರಾತ್ರಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ಸಂಘಟನೆ ರಾಜ್ಯ ಉಪಾಧ್ಯಕ್ಷ ಮಲ್ಲಿಕನಾಥ ಮಡಗೆ, ರಾಜಕುಮಾರ ಹಳ್ಳಿಖೇಡೆ, ಶರಣು ರಾಗಾ ಇದ್ದರು.