ಜನಾಕ್ರೋಶ ಅಲ್ಲ; ಹತಾಶೆ ಯಾತ್ರೆ

Vinodkumar Appe-2
Published on

ಬೀದರ್: ರಾಜ್ಯದಲ್ಲಿ ಬಿಜೆಪಿ ನಡೆಸುತ್ತಿರುವುದು ಜನಾಕ್ರೋಶ ಯಾತ್ರೆಯಲ್ಲ; ಹತಾಶೆಯ ಯಾತ್ರೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವಿನೋದಕುಮಾರ ಅಪ್ಪೆ ಟೀಕಿಸಿದ್ದಾರೆ.

ರಾಜ್ಯದ ಜನ ಕಾಂಗ್ರೆಸ್ ಆಡಳಿತದಿಂದ ಸಂತೃಪ್ತರಾಗಿದ್ದಾರೆ. ಸರ್ಕಾರದ ಜನಪರ ಯೋಜನೆಗಳು ಜನರ ಬದುಕಿನಲ್ಲಿ ಬಹಳಷ್ಟು ಬದಲಾವಣೆ ತಂದಿವೆ. ದಿನೇ ದಿನೇ ಹೆಚ್ಚುತ್ತಿರುವ ಸರ್ಕಾರದ ಜನಪ್ರಿಯತೆ ಬಿಜೆಪಿಗೆ ಸಹಿಸಲು ಆಗುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಜನರಿಗೆ ಸರ್ಕಾರದ ಬಗ್ಗೆ ಯಾವುದೇ ಆಕ್ರೋಶ ಇಲ್ಲ. ವಾಸ್ತವದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪ ಹಾಗೂ ಅಪಪ್ರಚಾರ ಮಾಡಲು ಯಾವುದೇ ಅಂಶಗಳಿಲ್ಲವೆಂಬ ಆಕ್ರೋಶ ಬಿಜೆಪಿಗೆ ಇದೆ. ಮುಂದೆಯೂ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಅವರಿಗೆ ಮನವರಿಕೆಯಾಗಿದೆ. ಹೀಗಾಗಿ ತಮ್ಮ ಆಕ್ರೋಶಕ್ಕೆ, ಜನಾಕ್ರೋಶ ಯಾತ್ರೆಯ ಹೆಸರಿಟ್ಟು ಹೊಸ ನಾಟಕ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ದೇಶದಲ್ಲಿ ಬೆಲೆ ಏರಿಕೆ ಹಾಗೂ ಜನಸಾಮಾನ್ಯರ ಬದುಕು ದುಸ್ತರವಾಗಲು ಕೇಂದ್ರ ಸರ್ಕಾರದ ನೀತಿಗಳೇ ಕಾರಣವಾಗಿವೆ. ಆದರೆ, ಜನರ ದಿಕ್ಕು ತಪ್ಪಿಸಲು ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಯಾತ್ರೆ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

ಪ್ರಧಾನಿ ಮೋದಿ ಅವರು ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ಕೊಟ್ಟಿದ್ದರು. ಈಗ ಉದ್ಯೋಗ ಕೇಳಿದರೆ ಪಕೋಡಾ ಮಾರಲು ಹೇಳುತ್ತಿದ್ದಾರೆ. ಬಿಜೆಪಿಯ ಭರವಸೆಗಳೆಲ್ಲ ಹುಸಿಯಾಗಿವೆ. ರಾಜ್ಯ ಸರ್ಕಾರ ಹಾಗೂ ಸಿದ್ದರಾಮಯ್ಯ ಅವರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರ ವಿರುದ್ಧ ಹುಸಿ ಆರೋಪ  ಮಾಡಿ ಛೀಮಾರಿ ಹಾಕಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಇತ್ತೀಚಿಗೆ ನಡೆದ ರಾಜ್ಯ ವಿಧಾನಸಭೆ ಉಪ ಚುನಾವಣೆಯಲ್ಲಿ ಇಬ್ಬರು ಮಾಜಿ ಮುಖ್ಯಮಂತ್ರಿಗಳ ಮಕ್ಕಳನ್ನು ಜನ ಸೋಲಿಸಿದ್ದಾರೆ. ಕೇಂದ್ರದ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಪಕ್ಷಗಳ ಬಗ್ಗೆ ಜನರಲ್ಲಿ ಎಷ್ಟು ಆಕ್ರೋಶ ಇದೆ ಎಂಬುದ್ದಕ್ಕೆ ಇದು ಉದಾರಣೆಯಾಗಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net