ಬೀದರ್: ಹಲವು ವರ್ಷಗಳಿಂದ ಜಿಲ್ಲೆಯಲ್ಲೇ ಬೀಡು ಬಿಟ್ಟಿರುವ ಅಧಿಕಾರಿಗಳ ವರ್ಗಾವಣೆಗಾಗಿ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಕಾಂಗ್ರೆಸ್ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿ ಜಾನಸನ್ ಘೋಡೆ ತಿಳಿಸಿದ್ದಾರೆ.
ಜೂನ್ 9 ರಂದು ನಿಯೋಗದಲ್ಲಿ ಬೆಂಗಳೂರಿಗೆ ತೆರಳಿ ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಪೌರಾಡಳಿತ ಸಚಿವ ರಹೀಂಖಾನ್ ಅವರಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.
ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಅನೇಕ ಅಧಿಕಾರಿಗಳು ಸುದೀರ್ಘ ಅವಧಿಯಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೆಲವರು ನಿಯೋಜನೆ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕೆಲವರು ಸ್ಥಳೀಯರೊಂದಿಗೆ ಶಾಮೀಲಾಗಿದ್ದರಿಂದ ಸಾರ್ವಜನಿಕರ ಕೆಲಸಗಳು ಸುಗಮವಾಗಿ ಆಗುತ್ತಿಲ್ಲ ಎಂಬ ದೂರುಗಳಿವೆ. ಕಾರಣ, ಅಧಿಕಾರಿಗಳ ವರ್ಗಾವಣೆಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಮುಖಂಡರಾದ ರತ್ನದೀಪ ಕಸ್ತೂರೆ, ರೋಹಿತ್ ಕಾಂಬಳೆ ಹಾಗೂ ರಾಜರತನ್ ಸಿಂಧೆ ಗುರುದಾಸ್ ನಿಯೋಗದಲ್ಲಿ ಇರಲಿದ್ದಾರೆ ಎಂದು ಹೇಳಿದ್ದಾರೆ.