

ಬೀದರ್: ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಪರಿಶಿಷ್ಟರಿಗೆ ಸ್ಮಶಾನ ಭೂಮಿ ಮಂಜೂರು ಮಾಡಬೇಕು ಎಂದು ಕಾಂಗ್ರೆಸ್ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿ ಜಾನಸನ್ ಘೋಡೆ ಬೇಡಿಕೆ ಮಂಡಿಸಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಅವರು ಈ ಕುರಿತು ಕಂದಾಯ ಸಚಿವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ವಿಶೇಷವಾಗಿ ಔರಾದ್ ತಾಲ್ಲೂಕಿನಲ್ಲಿ ಪರಿಶಿಷ್ಟ ಜಾತಿಯವರಿಗೆ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಇಲ್ಲ ಎಂದು ತಿಳಿಸಿದರು.
ಹಿಂದೆ ಸಾಮಾನ್ಯ ವರ್ಗದವರ ಸ್ಮಶಾನ ಭೂಮಿಯಲ್ಲಿ ಪರಿಶಿಷ್ಟರ ಶವ ಸಂಸ್ಕಾರ ಮಾಡಲಾಗುತ್ತಿತ್ತು. ಸದ್ಯ ಅದಕ್ಕೆ ಅವಕಾಶ ನೀಡದ ಕಾರಣ ಪರಿಶಿಷ್ಟರು ಸಂಕಷ್ಟ ಅನುಭವಿಸುವಂತಾಗಿದೆ ಎಂದು ಹೇಳಿದರು.
ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಸಮೀಕ್ಷೆ ನಡೆಸಿ, ಸ್ಮಶಾನ ಭೂಮಿ ಮಂಜೂರು ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಬೇಕು ಎಂದು ಮನವಿ ಮಾಡಿದರು.