ಮಾದಿಗ ಸಮುದಾಯಕ್ಕೆ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಒತ್ತಾಯ

Rohidas Ghoode
Published on

ಬೀದರ್: ಮಾದಿಗ ಸಮುದಾಯಕ್ಕೆ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನ ಕೊಡಬೇಕು ಎಂದು ಕಾಂಗ್ರೆಸ್ ಹಿರಿಯ ಮುಖಂಡ ರೋಹಿದಾಸ್ ಘೋಡೆ ಒತ್ತಾಯಿಸಿದ್ದಾರೆ.

ಲಿಂಗಾಯತ, ಬ್ರಾಹ್ಮಣ, ಕುರುಬ, ಮುಸ್ಲಿಮ್ ಸೇರಿದಂತೆ ವಿವಿಧ ಸಮುದಾಯದವರು ಜಿಲ್ಲಾ ಘಟಕದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಆದರೆ, ಮಾದಿಗ ಸಮುದಾಯಕ್ಕೆ ಈವರೆಗೆ ಆ ಹುದ್ದೆ ದೊರೆತಿಲ್ಲ ಎಂದು ಹೇಳಿದ್ದಾರೆ.

ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯವರು ಶೇ 24 ರಷ್ಟಿದ್ದು, ಇವರಲ್ಲಿ ಮಾದಿಗ ಸಮುದಾಯದವರ ಸಂಖ್ಯೆ ಹೆಚ್ಚಿದೆ. ಜನಸಂಖ್ಯೆ ಹಾಗೂ ಸಾಮಾಜಿಕ ನ್ಯಾಯದ ಆಧಾರದಲ್ಲಿ ಸಮುದಾಯಕ್ಕೆ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನ ಕೊಡಬೇಕಿದೆ ಎಂದು ತಿಳಿಸಿದ್ದಾರೆ.

ಪರಿಶಿಷ್ಟ ಜಾತಿಯ ಬಲಗೈ ಸಮುದಾಯದವರಿಗೆ ಹಿಂದೆ ವಿಧಾನ ಪರಿಷತ್ ಸದಸ್ಯ ಹುದ್ದೆ ಕೊಡಲಾಗಿತ್ತು. ಈಗ ಕೆಪಿಸಿಸಿಯಲ್ಲಿ ಇಬ್ಬರಿಗೆ ಹುದ್ದೆ ಕೊಡಲಾಗಿದೆ. ಅದಕ್ಕೆ ಯಾವುದೇ ಅಭ್ಯಂತರ ಇಲ್ಲ. ಮಾದಿಗ ಸಮುದಾಯಕ್ಕೂ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಬೇಕು ಎಂಬುದು ತಮ್ಮ ಬೇಡಿಕೆಯಾಗಿದೆ ಎಂದು ಹೇಳಿದ್ದಾರೆ.

ಮಾದಿಗ ಸಮುದಾಯ ಸ್ವಾತಂತ್ರ್ಯ ನಂತರ ಸತತವಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತ ಬಂದಿದೆ. ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ವಿಧಾನಸಭೆ, ಲೋಕಸಭೆ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ತಿಳಿಸಿದ್ದಾರೆ.

ಕಲಬುರಗಿ ಜಿಲ್ಲೆಯಲ್ಲಿ ಈಗಾಗಲೇ ಮಾದಿಗ ಸಮುದಾಯಕ್ಕೆ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಬಸವರಾಜ ಜಾಬಶೆಟ್ಟಿ ಅವರನ್ನು ಬೀದರ್ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡುವಾಗ ನಾನು ಸಹ ಆಕಾಂಕ್ಷಿಯಾಗಿದ್ದೆ. ಆಗ ಮಾಜಿ ಮುಖ್ಯಮಂತ್ರಿ ಎನ್. ಧರ್ಮಸಿಂಗ್ ಅವರು ಮುಂದೆ ಪರಿಗಣಿಸುವ ಭರವಸೆ ನೀಡಿದ್ದರು ಎಂದು ಹೇಳಿದ್ದಾರೆ.

ಜಿಲ್ಲಾ ಪಂಚಾಯಿತಿ ಸದಸ್ಯ ಹಾಗೂ ಪಕ್ಷದ ವಿವಿಧ ಹುದ್ದೆಗಳಲ್ಲಿ ಸಮರ್ಥವಾಗಿ ಕಾಯ ನಿರ್ವಹಿಸಿರುವ ನಾನೂ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ನನ್ನನ್ನು ಪರಿಗಣಿಸುವ ಮೂಲಕ ಮಾದಿಗ ಸಮುದಾಯಕ್ಕೆ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net