

ಬೀದರ್: ಜಿಲ್ಲೆಯ ಡಾ.ರಾಜಕುಮಾರ ಟಿ. ಅವರಿಗೆ ಮಸ್ಕಿಯ ದೇವನಾಮಪ್ರಿಯ ಅಶೋಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಕಲಬುರಗಿಯ ಕಲ್ಯಾಣ ಕರ್ನಾಟಕ ಗ್ರಂಥಪಾಲಕರ ಸಂಘದಿಂದ ಕೊಡಲಾಗುವ 2025ನೇ ಸಾಲಿನ ಉತ್ತಮ ಗ್ರಂಥಪಾಲಕ ಪ್ರಶಸ್ತಿ ದೊರೆತಿದೆ.
ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ಈಚೆಗೆ ನಡೆದ ರಾಷ್ಟ್ರೀಯ ಗ್ರಂಥಾಲಯ ಸಮ್ಮೇಳನದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ರಾಜಕುಮಾರ ಅವರು ತಾಲ್ಲೂಕಿನ ಮನ್ನಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಿರಿಯ ಶ್ರೇಣಿ ಗ್ರಂಥಪಾಲಕರಾಗಿ 18 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರಿಗೆ ಪ್ರಶಸ್ತಿ ಲಭಿಸಿದ್ದಕ್ಕೆ ಕಾಲೇಜಿನ ಪ್ರಾಚಾರ್ಯರು, ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದ್ದಾರೆ.