ಕುಸ್ತಿ ಗ್ರಾಮೀಣ ಬದುಕಿನ ಅವಿಭಾಜ್ಯ ಅಂಗ: ಜಿಲ್ಲಾಧಿಕಾರಿ ಡಾ.ಕುಮಾರ ಅಭಿಮತ

Wrestling tournament as part of Dussehra Mandya
Published on

ಶ್ರೀರಂಗಪಟ್ಟಣ: ಕುಸ್ತಿ ನಮ್ಮ ಗ್ರಾಮೀಣ ಬದುಕಿನ ಅವಿಭಾಜ್ಯ ಅಂಗ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.

ಶ್ರೀರಂಗಪಟ್ಟಣ ದಸರಾ ಅಂಗವಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಕುಸ್ತಿ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಆಧುನಿಕ ಯುಗದಲ್ಲಿ ಹೊಸ ಹೊಸ ಕ್ರೀಡೆಗಳು ಬೆಳೆಯುತ್ತಿರುವ ಹೊತ್ತಿನಲ್ಲಿ ಗ್ರಾಮೀಣ ಕ್ರೀಡೆಯಾದ ಕುಸ್ತಿ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ ಎಂದು ವಿಷಾದಿಸಿದರು.

ಕುಸ್ತಿ ಹಾಗೂ ಕುಸ್ತಿಪಟುಗಳನ್ನು ಉತ್ತೇಜಿಸುವ ದೃಷ್ಟಿಯಿಂದ ಪಂದ್ಯಾವಳಿ ಹಮ್ಮಿಕೊಳ್ಳಲಾಗಿದೆ. ಪ್ರಸ್ತುತ ಎಲ್ಲರೂ ಗ್ರಾಮೀಣ ಕ್ರೀಡೆಗಳನ್ನು ಬೆಳೆಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ಆಧುನಿಕವಾಗಿ ಎಷ್ಟೇ ಮುಂದುವರೆದರೂ ಗ್ರಾಮೀಣ ಬದುಕನ್ನು ಮರೆಯಬಾರದು. ಕ್ರೀಡಾಪಟುಗಳು ಅತ್ಯಂತ ಉತ್ಸಾಹದಿಂದ ಕ್ರೀಡೆಯಲ್ಲಿ ಭಾಗವಹಿಸಿ. ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವಿಕೆ ಮುಖ್ಯ ಎಂದು ತಿಳಿ ಹೇಳಿದರು.

ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಮಾತನಾಡಿ, ಮಹಾರಾಜರ ಕಾಲದಿಂದಲೂ ಕುಸ್ತಿ ಪಂದ್ಯಗಳನ್ನು ಆಯೋಜಿಸಲಾಗುತ್ತಿದೆ. ಅಂತೆಯೇ 2008ರಿಂದ ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮದಲ್ಲಿ ವಿಶೇಷವಾಗಿ ಕುಸ್ತಿಯನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಈಗಲೂ ಸಹ ಪ್ರತಿ ಊರಿನಲ್ಲೂ ಐದರಿಂದ ಆರು ಕುಸ್ತಿಪಟುಗಳು ಸಿಗುತ್ತಾರೆ. ಇಂತಹ ಗ್ರಾಮೀಣ ಕ್ರೀಡೆಗಳನ್ನು ಬೆಳೆಸಬೇಕು. ಕ್ರೀಡೆಯಲ್ಲಿ ಸಕ್ರಿಯವಾಗಿರುವುದರಿಂದ ದೈಹಿಕ ದೃಢತೆ ಮತ್ತು ಆರೋಗ್ಯಕರ ಜೀವನ ನಡೆಸಬಹುದು ಎಂದು ಹೇಳಿದರು.

ಪುರಸಭೆ ಅಧ್ಯಕ್ಷ ದಿನೇಶ್, ಜಿಲ್ಲಾ ವಾರ್ತಾಧಿಕಾರಿ ಎಸ್.ಎಚ್.ನಿರ್ಮಲಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ನಾಗಭೂಷಣ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net