

ಬಳ್ಳಾರಿ: ಕಲ್ಯಾಣ ಕರ್ನಾಟಕದ ಪೊಲೀಸ್ ಕಾನ್ಸ್‌ಸ್ಟೇಬಲ್ (ಸಿವಿಲ್) (ಪುರುಷ ಮತ್ತು ಮಹಿಳಾ), (ತೃತೀಯ ಲಿಂಗ ಪುರುಷ ಮತ್ತು ಮಹಿಳಾ)-1137 ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆಯು ಫೆ.25 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಬಳ್ಳಾರಿ ನಗರದ 12 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ವಸ್ತ್ರ ಸಂಹಿತೆಯನ್ನು ಪಾಲಿಸಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ರಂಜಿತ್ ಕುಮಾರ್ ಬಂಡಾರು ತಿಳಿಸಿದ್ದಾರೆ.
ಪುರುಷ ಮತ್ತು ತೃತೀಯಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‌ಗಳನ್ನು ಕಡ್ಡಾಯವಾಗಿ ಧರಿಸಬೇಕು ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್‌ಗಳನ್ನು ಧರಿಸುವುದು, ಜಿಪ್ ಪ್ಯಾಕೆಟ್‌ಗಳು, ದೊಡ್ಡ ಬಟನ್‌ಗಳು ಇರುವ ಶರ್ಟ್‌ಗಳನ್ನು ಧರಿಸುವಂತಿಲ್ಲ.
ಜೀನ್ಸ್‌ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‌ಗಳನ್ನು ಧರಿಸುವಂತಿಲ್ಲ. ಪರೀಕ್ಷಾ ಕೇಂದ್ರದೊಳಗೆ ಹೂಗಳನ್ನು ನಿಷೇಧಿಸಲಾಗಿದೆ. ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು (ಚಪ್ಪಲಿ) ಧರಿಸುವುದು. ಕುತ್ತಿಗೆ ಸುತ್ತಾ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಳನ್ನು ಧರಿಸುವುದು ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಮಹಿಳಾ ಮತ್ತು ತೃತೀಯಲಿಂಗಿ ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್‌ಗಳು ಅಥವಾ ಬಟನ್‌ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿಷೇಧಿಸಲಾಗಿದೆ. ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು ಮತ್ತು ಜೀನ್ಸ್ ಪ್ಯಾಂಟ್‌ಧರಿಸಬಾರದು, ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಅಭ್ಯರ್ಥಿಗಳು ಧರಿಸುವಂತೆ ನಿರ್ದೇಶಿಸಲಾಗಿದೆ.
ಎತ್ತರವಾದ ಹಿಮ್ಮಡಿಯ ಶೂಗಳು, ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ, ಚಪ್ಪಲಿಗಳನ್ನಾಗಲಿ ಧರಿಸಬಾರದು. ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ. ಮಹಿಳಾ ಮತ್ತು ತೃತೀಯಲಿಂಗಿ ಮಹಿಳಾ ಅಭ್ಯರ್ಥಿಗಳು ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದು ನಿಷೇಧಿಸಲಾಗಿದೆ (ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ). ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಮುಂಬರುವ ದಿನಗಳಲ್ಲಿ ಎಸ್‌ಎಂಎಸ್ ಮೂಲಕ ಮಾಹಿತಿಯನ್ನು ನೀಡಲಾಗುವುದು. ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ ವಸ್ತ್ರ ಸಂಹಿತೆಯೊಂದಿಗೆ ಹಾಜರಾಗಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.