

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಹಳೇಹುಬ್ಬಳ್ಳಿ ಗಲಭೆ ಪ್ರಕರಣವನ್ನು ಎನ್ಐಎ ತನಿಖೆ ನಡೆಸುತ್ತಿದ್ದು, ರಾಜ್ಯ ಸರ್ಕಾರಕ್ಕೆ ಈ ಪ್ರಕರಣವನ್ನು ಹಿಂಪಡೆಯುವ ಅಧಿಕಾರವಿಲ್ಲ. ಇದು ರಾಜ್ಯ ಸರ್ಕಾರಕ್ಕೂ ಗೊತ್ತಿದ್ದು, ಒಂದು ಸಮಾಜದ ಓಲೈಕೆಗೆ ಈ ರೀತಿ ಮಾಡುತ್ತಿದೆ. ಇದರಿಂದ ಸಮಾಜಕ್ಕೆ ದೊಡ್ಡ ತಪ್ಪು ಸಂದೇಶ ರವಾನೆ ಮಾಡುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಪೊಲೀಸ್ ಠಾಣೆಯ ಮೇಲೆ ದಾಳಿ ಮಾಡಿದ ಗಂಭೀರವಾದ ಪ್ರಕರಣವಾಗಿದೆ. ಹಾಗಿದ್ದರೆ ಇನ್ನು ಮುಂದೆ ಪೊಲೀಸ್ ಸ್ಟೇಷನ್ ಮೇಲೆ ದಾಳಿ ಮಾಡಿದರೆ ಪೊಲೀಸರು ಏನೂ ಮಾಡುವಂತಿಲ್ಲವೆ ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ತಮ್ಮ ತಪ್ಪು ಹಾಗೂ ಹಗರಣಗಳನ್ನು ಮುಚ್ಚಿಕೊಳ್ಳಲು ಮುಖ್ಯಮಂತ್ರಿಯವರು ಈ ರೀತಿಯ ಆತುರದ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದರು.
ರಾಜ್ಯ ಸರ್ಕಾರ ದುಷ್ಟರ ಸಂಹಾರ ಮಾಡುವ ಕುರಿತು ಜಾಹೀರಾತು ನೀಡಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ತಾವು ಏನೂ ತಪ್ಪು ಮಾಡಿಲ್ಲ ಎಂಬ ಭಾವನೆ ಮೂಡಿಸುವ ಸಲುವಾಗಿ ಇತರರನ್ನು ದುಷ್ಟರು ಎಂದು ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಈ ರೀತಿ ಹಿಂದೆ ಆಗಿರಲಿಲ್ಲ. ಸರ್ಕಾರಿ ಜಾಹೀರಾತನ್ನು ತಮ್ಮ ಸ್ವಂತ ರಾಜಕಾರಣಕ್ಕೆ ಬಳಕೆ ಮಾಡಿಕೊಳ್ಳುತ್ತಿರುವುದು ಇದೇ ಪಥಮ. ಇದು ಅತ್ಯಂತ ಖಂಡನೀಯ ಎಂದು ಹೇಳಿದರು.