

ಯಾದಗಿರಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಯಾದಗಿರಿ ಮತ್ತು ವಡಗೇರಾ ಮತ ಕೇಂದ್ರಗಳಿಗೆ ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.
ನಗರದ ತಹಸಿಲ್ ಕಚೇರಿಯಲ್ಲಿನ ಮತಗಟ್ಟೆ ಸಂಖ್ಯೆ 106, ಹಾಗೂ ವಡಗೇರಾ ಸರ್ಕಾರಿ ಹೈಸ್ಕೂಲ್ನಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆ ಸಂಖ್ಯೆ 104ಗೆ ಭೇಟಿ ನೀಡಿದ ಅವರು, ಮತದಾನ ಪ್ರಕ್ರಿಯೆಯ ಕುರಿತು ಮತಗಟ್ಟೆ ಅಧಿಕಾರಿಗಳಿಂದ ಮಾಹಿತಿ ಪಡೆದದರು. ಮತದಾನ ಮಾಡಲು ಆಗಮಿಸುವ ಪ್ರತಿಯೊಬ್ಬ ಮತದಾರರ ಗುರುತಿನ ಚೀಟಿ ಕಡ್ಡಾಯವಾಗಿ ಪರಿಶೀಲಿಸಿ, ಚುನಾವಣಾ ನಿಯಮಾನುಸಾರ ಮತದಾನಕ್ಕೆ ಅವಕಾಶ ಕಲ್ಪಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸೂಚಿಸಿದರು. ಇದೇ ವೇಳೆ, ಮತಗಟ್ಟೆ ಕೇಂದ್ರಗಳಲ್ಲಿ ಮತದಾರರಿಗೆ ಕುಡಿಯುವ ನೀರು ಸೇರಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿರುವ ಕುರಿತು ಸಿಬ್ಬಂದಿಯಿಂದ ಮಾಹಿತಿ ಪಡೆದರು. ಎಸ್ಪಿ ಪೃಥ್ವಿಕ್ ಶಂಕರ್ ಅವರು, ಪೊಲೀಸ್ ಬಂದೋಬಸ್ತ್ ಬಗ್ಗೆ ಹಾಗೂ ಸುರತಾ ಕ್ರಮಗಳ ಬಗ್ಗೆ ಪರಿಶೀಲಿಸಿದರು. ಇದಕ್ಕೂ ಮುನ್ನ ಬೆಳಗ್ಗೆ ಯಾದಗಿರಿ ಮತಗಟ್ಟೆಗೆ ಅಪರ ಜಿಲ್ಲಾಧಿಕಾರಿ ರಮೇಶ್ ಕೋಲಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.