ಯಡ್ರಾಮಿ; ಕೊಳಚೆ ತುಳಿದು ದೇವಸ್ಥಾನ ಪ್ರವೇಶ !

PH 02
Published on

ಯಡ್ರಾಮಿ: ವಾರ್ಡ್ 1ರಲ್ಲಿನ ಶ್ರೀ ರಾಮಲಿಂಗೇಶ್ವರ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದಲ್ಲಿ ಚರಂಡಿ ನೀರು ರಸ್ತೆಗೆ ಹರಿಯುತ್ತಿದ್ದು, ಸಾರ್ವಜನಿಕರು ಸಾಂಕ್ರಾಮಿಕ ಕಾಯಿಲೆ ಭೀತಿಯಲ್ಲಿಯೇ ಜೀವನ ಸಾಗಿಸುತ್ತಿದ್ದಾರೆ.

ವಾರ್ಡ್ನಲ್ಲಿ ಸಿಸಿ ರಸ್ತೆ ಮಾಡಿ, ಚರಂಡಿಗಳನ್ನು ನಿರ್ಮಿಸಲಾಗಿದೆ. ಆದರೆ ಪಟ್ಟಣ ಪಂಚಾಯಿತಿ ಸಿಬ್ಬಂದಿ ಸಮರ್ಪಕವಾಗಿ ಚರಂಡಿಗಳನ್ನು ಸ್ವಚ್ಛಗೊಳಿಸದಿರುವುದರಿಂದ ಸಮಸ್ಯೆ ತಲೆದೂರಿದೆ. ರಾಮಲಿಂಗೇಶ್ವರ ದೇವಸ್ಥಾನದ ಮುಂದೆಯೇ ಚರಂಡಿ ನೀರು ನಿಲ್ಲುತ್ತಿದೆ. ಪಾದಚಾರಿಗಳಿಗೂ ಸಮಸ್ಯೆ ಆಗುತ್ತಿದೆ. ಅಲ್ಲದೆ ದೇಗುಲಕ್ಕೆ ಬರುವವರು ಕೊಳಚೆ ದಾಟಿಕೊಂಡು ಬರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕಸ- ಕಡ್ಡಿಯಿಂದ ಚರಂಡಿಗಳು ಬ್ಲಾಕ್ ಆಗಿದ್ದು, ನೀರು ಸುಗಮವಾಗಿ ಹರಿಯುತ್ತಿಲ್ಲ. ಇದರಿಂದಾಗಿ ರಸ್ತೆಯ ಮೇಲೆ ಕೊಳಚೆ ನೀರು ನಿಲ್ಲುತ್ತಿವೆ. ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ಜನರು ಹಲವು ಕಾಯಿಲೆಗಳಿಂದ ತತ್ತರಿಸುತ್ತಿದ್ದಾರೆ. ಸಾಕಷ್ಟು ಬಾರಿ ಸಂಬಂಧಿತ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.

ಯಡ್ರಾಮಿಯ ವಾರ್ಡ್ 1ರಲ್ಲಿನ ಚರಂಡಿಗಳನ್ನು ಸ್ವಚ್ಛಗೊಳಿಸುವಂತೆ ಪಟ್ಟಣ ಪಂಚಾಯಿತಿ ಸಿಬ್ಬಂದಿಗೆ ಸಾಕಷ್ಟು ಬಾರಿ ಮನವಿ ಮಾಡಿದ್ದೇವೆ. ಆದರೆ ಯಾರೊಬ್ಬರೂ ತಲೆ ಕೆಡಿಸಿಕೊಂಡಿಲ್ಲ. ಇದೀಗ ಶ್ರಾವಣ ಮಾಸವಾಗಿದ್ದು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಶ್ರೀ ರಾಮಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುತ್ತಾರೆ. ಕೂಡಲೇ ಗಮನಹರಿಸಿ, ರಸ್ತೆಯ ಮೇಲೆ ಹರಿಯುತ್ತಿರುವ ಕೊಳಚೆ ನೀರಿಗೆ ಮುಕ್ತಿ ಕಲ್ಪಿಸಬೇಕು.
| ಚನ್ನವೀರ ತಾಳಿಕೋಟಿ
ಸ್ಥಳೀಯ ನಿವಾಸಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net