ಬಾಲಕಿಯನ್ನು ಗರ್ಭಿಣಿ ಮಾಡಿದವನ ಬಂಧನ

Crime Logo
Published on

ಯಳಂದೂರು: ವಿವಾಹವಾಗುವುದಾಗಿ ನಂಬಿಸಿ ಬಾಲಕಿಯೊಬ್ಬಳನ್ನು ಗರ್ಭಿಣಿ ಮಾಡಿ ಪರಾರಿಯಾಗಿದ್ದವನನ್ನು ಯಳಂದೂರು ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.

ಮಸಣಾಪುರ ಗ್ರಾಮದ ಮನು ಬಂಧಿತ. ಆರೋಪಿಯೂ 17 ವರ್ಷದ ಬಾಲಕಿಯನ್ನು ವಿವಾಹವಾಗುವುದಾಗಿ ನಂಬಿಸಿದ್ದ. ಬಳಿಕ ಆಕೆಯನ್ನು ಬಿಳಿಗಿರಿ ರಂಗನಬೆಟ್ಟಕ್ಕೆ ಕರೆದುಕೊಂಡು ಹೋಗಿ ಅಲ್ಲೇ ಬಾಡಿಗೆ ರೂಂವೊಂದನ್ನು ಪಡೆದು ದೈಹಿಕ ಸಂಪರ್ಕ ಬೆಳೆಸಿದ್ದ. ಅಲ್ಲದೆ ಈಕೆಯ ತಾಯಿ ಇಲ್ಲದ ಸಂದರ್ಭದಲ್ಲಿ ಬಾಲಕಿ ಮನೆಗೆ ತೆರಳಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ.

ಈಕೆಗೆ ಹುಷಾರಿಲ್ಲದ ಕಾರಣ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಿದ ಸಂದರ್ಭದಲ್ಲಿ ಈಕೆ 7 ತಿಂಗಳ ಗರ್ಭಿಣಿ ಎಂಬ ವಿಷಯ ತಿಳಿದುಬಂದಿದೆ. ಬಾಲಕಿಯ ಹೇಳಿಕೆಯ ಮೇರೆಗೆ ಮನುನನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಸಿಪಿಐ ಶ್ರೀಕಾಂತ್ ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net