

ಯಳಂದೂರು: ಬಿಳಿಗಿರಿರಂಗನ ಬೆಟ್ಟದಲ್ಲಿ ಗುರುವಾರ ಗಾಳಿಗೆ ಮರವೊಂದು ರಸ್ತೆಗೆ ಉರುಳಿ ಬಿದ್ದಿದೆ. ಪಕ್ಕದಲ್ಲೇ ಇದ್ದ ವಿದ್ಯುತ್ ಕಂಬವೂ ಬಿದ್ದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ.
ಬಿಳಿಗಿರಿರಂಗನ ಬೆಟ್ಟದಿಂದ ಕೆ. ಗುಡಿ ಮಾರ್ಗಕ್ಕೆ ತೆರಳುವ ಮುಖ್ಯ ರಸ್ತೆಯ ವಿಜಿಕೆಕೆ ಬಳಿ ಇರುವ ತಿರುವಿನಲ್ಲಿ ದೊಡ್ಡ ಮರವೊಂದು ಗಾಳಿ ಮಳೆಗೆ ಧರೆಗುರುಳಿದೆ. ಮರದ ಪಕ್ಕದಲ್ಲಿದ್ದ ವಿದ್ಯುತ್ ಕಂಬವೂ ನೆಲಕ್ಕುರುಳಿದೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಸೆಸ್ಕ್ ಸಿಬ್ಬಂದಿಗೆ ಮಾಹಿತಿ ನೀಡಿದರು. ಕೂಡಲೇ ಕಾರ್ಯೋನ್ಮುಖರಾದ ಸಿಬ್ಬಂದಿ ವಿದ್ಯುತ್ ಕಡಿತಗೊಳಿಸಿದರು. ಅದೃಷ್ಟವಶಾತ್ ಈ ಸಮಯದಲ್ಲಿ ವಾಹನ ಸಂಚಾರ ಇಲ್ಲದಿದ್ದರಿಂದ ಯಾವುದೇ ಅವಘಡ ಸಂಭವಿಸಿಲ್ಲ. ನಂತರ ಅರಣ್ಯ ಇಲಾಖೆ ಸಿಬ್ಬಂದಿ ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.