ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಲು ಯಶ್​ಪಾಲ್​ ಸುವರ್ಣ ಆಗ್ರಹ

udp-yashpal suvarna mla
Published on

ಉಡುಪಿ: ಜಿಲ್ಲೆಯಲ್ಲಿ ಕಳೆದ 15 ತಿಂಗಳಿಂದ ಕೇವಲ ಒಂದು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆದಿದ್ದು, ಜಿಲ್ಲೆಯಲ್ಲಿ ಉಂಟಾದ ಮಳೆಹನಿ ಸಹಿತ ವಿವಿಧ ಗಂಭೀರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ರೂಪಿಸುವ ನಿಟ್ಟಿನಲ್ಲಿ ತಕ್ಷಣ ಸಭೆಯನ್ನು ನಡೆಸಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೂಚನೆ ನೀಡುವಂತೆ ಶಾಸಕ ಯಶ್​ ಪಾಲ್​ ಸುವರ್ಣ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ 2023 ನವೆಂಬರ್​ ತಿಂಗಳಿನಲ್ಲಿ ಸಭೆ ನಡೆಸಿದ್ದು, ಸಭೆಯ ರ್ನಿಣಯ ಇಂದಿಗೂ ಅನುಷ್ಠಾನಗೊಂಡಿಲ್ಲ. ಜಿಲ್ಲೆಯಲ್ಲಿ ಈ ಬಾರಿ ವ್ಯಾಪಕ ಗಾಳಿ ಮಳೆಯಿಂದ ಸುಮಾರು 235 ಕೋಟಿ ನಷ್ಟವಾಗಿರುವ ಬಗ್ಗೆ ಜಿಲ್ಲಾಧಿಕಾರಿಗಳು ಈಗಾಗಲೇ ಸರ್ಕಾರಕ್ಕೆ ವರದಿ ಸಲ್ಲಿಸಿದ್ದರೂ, ರಾಜ್ಯಸರ್ಕಾರ ಕಿಂಚಿತ್​ ಅನುದಾನವನ್ನು ಮಂಜೂರು ಮಾಡಿಲ್ಲ.
ಜಿಲ್ಲೆಯಲ್ಲಿ ಕಡಲ್ಕೊರೆತ, ರಸ್ತೆ, ಕಾಲು ಸೇತುವೆ, ರೇಶನ್​ ಕಾರ್ಡ್​, ಜಿಲ್ಲಾಸ್ಪತ್ರೆ, ಸರ್ಕಾರಿ ಬಸ್​ ಸೌಲಭ್ಯ, ಅಗ್ನಿಶಾಮಕ ದಳ ಸಹಿತ ವಿವಿಧ ಇಲಾಖೆಯ ಸಮಸ್ಯೆಗಳ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಜಿಲ್ಲೆಯನ್ನು ರಾಜ್ಯ ಸರ್ಕಾರ ಸಂಪೂರ್ಣ ಕಡೆಗಣಿಸಿದೆ ಎಂದು ಆರೋಪಿಸಿದ್ದಾರೆ.

ವಯನಾಡು ದುರಂತಕ್ಕೆ ತಕ್ಷಣ 100 ಕೋಟಿ ಅನುದಾನ ಮಂಜೂರು ಮಾಡಿ ಮಾನವೀಯತೆ ಮೆರೆದ ರಾಜ್ಯ ಸರ್ಕಾರ ಉಡುಪಿ ಜಿಲ್ಲೆಯ ಪ್ರಾಕೃತಿಕ ವಿಕೋಪದ ಸಂತ್ರಸ್ತರ ನೆರವಿಗೆ ನಿಲ್ಲಲು ಮರೆತಿದೆ. ಜಿಲ್ಲಾ ಉಸ್ತುವಾರಿ ಸಚಿವರು ಈಗಾಗಲೇ ಉಡುಪಿ ಪರ್ಯಾಯ ಮಹೋತ್ಸವ ಸಂದರ್ಭದಲ್ಲಿ ಘೋಷಣೆ ಮಾಡಿದ 10 ಕೋಟಿ ರೂ. ಹಾಗೂ ಕಡಲ್ಕೊರೆತ ತಡೆಗೆ 5 ಕೋಟಿ ಅನುದಾನ ಇನ್ನೂ ಮರೀಚಿಕೆಯಾಗಿದ್ದು, ಜಿಲ್ಲೆಯ ಜನರ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ತಕ್ಷಣ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಕಾರ್ಯಕ್ಕೆ ಮುಂದಾಗುವಂತೆ ಯಶ್​ ಪಾಲ್​ ಸುವರ್ಣ ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net