

ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ಮತ್ತೆ ಚುರುಕು ಪಡೆದಿದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗುರುವಾರದಿಂದ ಈ ವಾರಾಂತ್ಯದವರೆಗೆ ಉತ್ತರ ಒಳನಾಡು ಹೊರತುಪಡಿಸಿ ಉಳಿದೆಡೆ ಉತ್ತಮ ಮಳೆಯಾಗಲಿದೆ. ಗುರುವಾರ ಹಾಗೂ ಶುಕ್ರವಾರ ದಕ್ಷಿಣಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಕೆಲವೆಡೆ ಭಾರಿ ವರ್ಷಧಾರೆಯಾಗಲಿದೆ. ಇದೇ ಅವಧಿಯಲ್ಲಿ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದ ಮಳೆಯಾಗಲಿದೆ.
ಈ ವಾರಾಂತ್ಯದವರೆಗೆ ಬೆಂಗಳೂರು ಹಾಗೂ ಸುತ್ತಲಿನ ಜಿಲ್ಲೆಗಳಲ್ಲಿ ಕೆಲವೊಮ್ಮೆ ಹಗುರ ಅಥವಾ ಸಾಧಾರಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.