

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಪ್ರಸ್ತುತ 10 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ ಜೂ.21 ರಂದು ಜಿಲ್ಲಾಮಟ್ಟದ ಯೋಗ ದಿನ ಆಚರಿಸಲು ಅಧಿಕಾರಿಗಳು ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಸೂಚನೆ ನೀಡಿದರು.
ದೇವನಹಳ್ಳಿ ತಾಲೂಕು ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ 10 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಬಹಳ ಅಚ್ಚುಕಟ್ಟಾಗಿ ನಡೆಸಲು ಚಿಂತನೆ ನಡೆಸಿದ್ದು, ಸಂಬಂಧಪಟ್ಟ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಪೂರ್ವ ಸಿದ್ದತೆ ಕೈಗೊಳ್ಳಬೇಕು ಎಂದು ತಿಳಿಸಿದರು.
6ರಿಂದ 8.30ವರೆಗೆ: ಪ್ರತಿ ವರ್ಷದಂತೆ ಈ ಬಾರಿಯೂ ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ ಯೋಗ ದಿನ ಆಚರಿಸಲು ನಿರ್ಧರಿಸಿದ್ದು, ಅಂದು ಬೆಳಗ್ಗೆ 6 ಗಂಟೆಯಿಂದ 8:30 ರವರೆಗೆ ಕಾರ್ಯಕ್ರಮ ನಡೆಯಲಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು, ಅಧಿಕಾರಿಗಳು, ಸಿಬ್ಬಂದಿ, ಸಂಘಸಂಸ್ಥೆಗಳ ಪ್ರತಿನಿಧಿಗಳಿಂದ ಯೋಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದಕ್ಕಾಗಿ
ದೇವನಹಳ್ಳಿ ಕ್ರೀಡಾಂಗಣದಲ್ಲಿ ಸ್ವಚ್ಛತೆ, ಕುಡಿಯುವ ನೀರು, ಲಘು ಉಪಹಾರದ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ ತುರ್ತು ಸಂದರ್ಭದಲ್ಲಿ ಆರೋಗ್ಯ ಇಲಾಖೆಯಿಂದ ತುರ್ತು ಚಿಕಿತ್ಸಾ ಅಂಬುಲೆನ್ಸ್ ವ್ಯವಸ್ಥೆ, ಸೇರಿ ಇನ್ನಿತರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು. ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಶಾಲಾ-ಕಾಲೇಜುಗಳು, ಹಾಸ್ಟೆಲ್ ಗಳಲ್ಲಿರುವ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆಯಾ ಇಲಾಖೆಯ ಅಧಿಕಾರಿಗಳು ಕ್ರಮವಹಿಸಬೇಕು. ಶಿಷ್ಟಾಚಾರದಂತೆ ಜನಪ್ರತಿನಿಧಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ, ಕಾರ್ಯಕ್ರಮ ಯಶಸ್ವಿಗೆ ಅಗತ್ಯ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಮಹಿಳಾ ಸಬಲೀಕರಕ್ಕಾಗಿ ಯೋಗ: ಮಹಿಳಾ ಸಬಲೀಕರಣಕ್ಕಾಗಿ ಯೋಗ ಎಂಬುದು 2024ರ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಘೋಷವಾಕ್ಯವಾಗಿದ್ದು, ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ಸಂಘಸಂಸ್ಥೆಗಳ ಪ್ರತಿನಿಧಿಗಳು, ಜಿಲ್ಲೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯೋಗ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು. ಇದೇ ವೇಳೆ ಸಭೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪೋಸ್ಟರ್ ಬಿಡುಗಡೆಗೊಳಿಸಲಾಯಿತು.