

ಮಂಡ್ಯ: ಶ್ರೀರಂಗಪಟ್ಟಣ ತಾಲೂಕು ಕೆಆರ್‌ಎಸ್ ಬೃಂದಾವನ ಗಾರ್ಡನ್‌ನಲ್ಲಿ ಜೂ.21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಯೋಜಿಸಲಾಗಿದೆ. ಇದಕ್ಕೆ ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರದ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಅಂದು ಬೆಳಗ್ಗೆ 7 ಗಂಟೆಯಿಂದ 8 ರವರೆಗೆ ಯೋಗ ಪ್ರದರ್ಶನ ನಡೆಯಲಿದೆ ಎಂದು ಹೇಳಿದರು.
ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಸಾರ್ವಜನಿಕ ಶಿಕ್ಷಣ ಸಂಸ್ಥೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಪತಂಜಲಿ ಯೋಗ ಶಿಕ್ಷಣ ಸಮಿತಿ, ಆಯುರ್ ಮಟಂ ಆಯುರ್ವೇದ ಹೆಲ್ತ್ ವಿಲೇಜ್ ಸಹಯೋಗದಲ್ಲಿ ಹೆಚ್ವಿನ ಸಂಖ್ಯೆಯಲ್ಲಿ ಜನರು ಭಾಗವಹಿಸಬೇಕು. ಇದಕ್ಕೆ ಬೇಕಿರುವ ಪೂರ್ವಾಭ್ಯಾಸವನ್ನು ಮಾಡಿಕೊಳ್ಳಿ. ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಚಂದನವನ ಮಠದ ಡಾ.ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ ಅವರು ಭಾಗವಹಿಸಲಿದ್ದಾರೆ ಎಂದರು.
ಅಂದು 3000 ವಿದ್ಯಾರ್ಥಿಗಳಿಂದ 45 ನಿಮಿಷಗಳ ಯೋಗಾಭ್ಯಾಸ ನಡೆಯಲಿದ್ದಾರೆ. ತಾಡಾಸನ, ವೃಕ್ಷಾಸನ, ಪಾದ ಹಸ್ತಸನ, ತ್ರಿಕೋನಸನ, ಭದ್ರಾಸನ, ವಜ್ರಾಸನ, ಅರ್ಧ ಉಷ್ಟ್ರಸನ, ಶಶಾಂಕಾಸನ, ಉತ್ಥಾನ ಮಂಡೂಕಾಸನ, ವಕ್ರಸನ, ಮಕರಾಸನ, ಭುಜಂಗಾಸನ, ಶಲಭಾಸನ, ಸೇತುಬಂಧಾಸನ, ಉತ್ಥಾನ ಪಾದಾಸನ, ಅರ್ಧ ಹಲಾಸನ, ಪವನಮುಕ್ತಾಸನ, ಶವಾಸನ, ಕಪಾಲ ಭಾತಿ, ನಾಡಿಶೋಧನ ಪ್ರಾಣಯಾಮ ಶೀಥಲಿ ಪ್ರಾಣಯಾಮ, ಭ್ರಾಮರಿ ಪ್ರಾಣಾಯಾಮ ಹಾಗೂ 5 ನಿಮಿಷದ ಧ್ಯಾನ ನಡೆಯಲಿದೆ ಎಂದು ವಿವರಿಸಿದರು.
ಪ್ರತಿಯೊಬ್ಬರೂ ಜೀವನದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಮುಖ್ಯ. ಜೀವನದಲ್ಲಿ ದೈಹಿಕ ಹಾಗೂ ಮಾನಸಿಕವಾಗಿಯೂ ಸದೃಢರಾಗಿರಲು ಪ್ರತಿದಿನ ಯೋಗ ಮಾಡುವುದು ಅತ್ಯಾವಶ್ಯಕ. ಯೋಗ ಮಾಡುವುದರಿಂದ ಅನೇಕ ರೋಗಗಳನ್ನು ತಡೆಗಟ್ಟಬಹುದು. ರೋಗಗಳು ಬಂದ ಬಳಿಕ ಯೋಗ ಮಾಡುವ ಬದಲು, ರೋಗ ಬರುವ ಮುನ್ನವೇ ಮುಂಜಾಗ್ರತಾ ಕ್ರಮವಾಗಿ ಯೋಗಾಭ್ಯಾಸ ಮಾಡಿ ರೋಗ ತಡೆಗಟ್ಟುವುದು ಉತ್ತಮ. ಜನರಲ್ಲಿ ಯೋಗದ ಕುರಿತು ಅರಿವು ಮೂಡಿಸಲೆಂದೇ ಪ್ರತಿವರ್ಷ ಜೂ.21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಮಾಡಲಾಗುತ್ತಿದೆ. ಆದ್ದರಿಂದ ನಾವು ಯೋಗವನ್ನು ಕೇವಲ ಒಂದು ದಿನಕ್ಕೆ ಸೀಮಿತ ಮಾಡುವ ಬದಲು ಅದನ್ನು ಜೀವನದಲ್ಲಿ ಅಳವಡಿಸಿಕೊಂಡು ಪ್ರತಿನಿತ್ಯ ಅಭ್ಯಾಸ ಮಾಡಿ ದೈಹಿಕ ಹಾಗೂ ಮಾನಸಿಕ ಆರೋಗ್ಯವಾಗಿರುವುದು ಒಳ್ಳೆಯದು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸ್ಿ, ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ.ಬಿ.ಎಸ್.ಸೀತಾಲಕ್ಷ್ಮೀ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಎನ್.ಧನಂಜಯ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಡಾ. ಸಿದ್ದಲಿಂಗೇಶ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಟಿ.ಜವರೇಗೌಡ ಇತರರಿದ್ದರು.