ಜೂ.21ರಂದು ಕೆಆರ್‌ಎಸ್‌ನಲ್ಲಿ ಯೋಗ ದಿನಾಚರಣೆ: ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಮಾಹಿತಿ

1 (1)
Published on

ಮಂಡ್ಯ: ಶ್ರೀರಂಗಪಟ್ಟಣ ತಾಲೂಕು ಕೆಆರ್‌ಎಸ್ ಅಣೆಕಟ್ಟೆಯ ಆವರಣದಲ್ಲಿ ಜೂ.21ರಂದು 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಯೋಗ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಅಂದು ಬೆಳಗ್ಗೆ 7 ಗಂಟೆಯಿಂದ 7.45ರವರೆಗೆ ಯೋಗ ಪ್ರದರ್ಶನವಿರಲಿದೆ ಎಂದು ಹೇಳಿದರು.

ಯೋಗ ದಿನಾಚರಣೆ ಕಾರ್ಯಕ್ರಮವು ಅಚ್ಚುಕಟ್ಟಾಗಿ ನಡೆಯಬೇಕು. ಅಧಿಕಾರಿಗಳು ತಮಗೆ ವಹಿಸಿರುವ ಕೆಲಸವನ್ನು ಜವಾಬ್ದಾರಿಯಿಂದ ನಿರ್ವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ಅಂದು ಬೆಳಗ್ಗೆ 7 ಗಂಟೆಗೆ ಯೋಗ ಪ್ರಾರಂಭವಾಗಲಿದೆ. ಆದ್ದರಿಂದ ಅಧಿಕಾರಿಗಳು, ಯೋಗಪಟುಗಳು, ಜನರು ಬೆಳಗ್ಗೆ 6ಗಂಟೆಗೆ ಕಾರ್ಯಕ್ರಮದ ಸ್ಥಳದಲ್ಲಿರಬೇಕು. ಜಿಲ್ಲೆಯಲ್ಲಿ 1500 ಜನರು ಯೋಗ ದಿನಾಚರಣೆಯಲ್ಲಿ ಭಾಗವಹಿಸುವ ಗುರಿ ನಿಗದಿಪಡಿಸಲಾಗಿದ್ದು, ಪ್ರತಿ ತಾಲೂಕಿನಿಂದ 200 ರಿಂದ 300 ಜನರನ್ನು ಕರೆ ತರಬೇಕು. ಜತೆಗೆ ಎರಡು ದಿನ ಪೂರ್ವ ಪ್ರದರ್ಶನ ನೀಡಬೇಕು. ಯೋಗ ಶಿಕ್ಷಕರು ಭಾಗಿಯಾಗಲಿದ್ದಾರೆ ಎಂದರು.

ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಪ್ರತಿ ಹಳ್ಳಿ, ನಗರ, ಪಟ್ಟಣದಲ್ಲಿ ಯೋಗದ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ಆಸ್ಪತ್ರೆ, ಪೊಲೀಸ್ ಠಾಣೆ, ಬಸ್ ನಿಲ್ದಾಣ, ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಯೋಗ ದಿನಾಚರಣೆಯ ಬ್ಯಾನರ್ ಮತ್ತು ಯೋಗ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಘೋಷಣಾ ವಾಕ್ಯಗಳನ್ನು ಪ್ರದರ್ಶಿಸಬೇಕು. ಶಿಷ್ಟಾಚಾರದ ಪ್ರಕಾರ ಜನಪ್ರತಿನಿಧಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲು ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.

ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಮಾತನಾಡಿ, ಜಿಲ್ಲೆಯ ಯೋಗ ಸಂಸ್ಥೆಗಳು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಎನ್‌ಎಸ್‌ಎಸ್ ಘಟಕ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಆಯುಷ್ ಯೋಗ ತರಬೇತುದಾರರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿರುವ ಯೋಗ ತರಬೇತುದಾರರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು. ಜೂ.21ರಂದು ಆಗಮಿಸುವ ಯೋಗಪಟುಗಳಿಗೆ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಅಂದು ಬೆಳಗ್ಗೆ ಮಂಡ್ಯದಿಂದ ಕೆಆರ್‌ಎಸ್ ಮತ್ತು ಕೆಆರ್‌ಎಸ್‌ನಿಂದ ಮಂಡ್ಯದವರೆಗೆ ಬಸ್ ಸೌಲಭ್ಯದ ವ್ಯವಸ್ಥೆ ಮಾಡಲಾಗಿದೆ. ಪಾಲ್ಗೊಳ್ಳುವ ಎಲ್ಲರಿಗೂ ಸಿಹಿ ಹಾಗೂ ತಿಂಡಿಯ ವ್ಯವಸ್ಥೆ ಮಾಡಲಾಗಿದೆ ಎಂದರು.

ಸಭೆಯಲ್ಲಿ ಪ್ರಭಾರ ಮಂಡ್ಯ ಉಪವಿಭಾಗಾಧಿಕಾರಿ ಕೃಷ್ಣಕುಮಾರ್, ರೆಡ್‌ಕ್ರಾಸ್ ಸಂಸ್ಥೆ ಸಭಾಧ್ಯಕ್ಷೆ ಮೀರಾ ಶಿವಲಿಂಗಯ್ಯ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಸೀತಾಲಕ್ಷ್ಮೀ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಓಂಪ್ರಕಾಶ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶ್ರೀನಿವಾಸ್, ತಹಸೀಲ್ದಾರ್‌ಗಳಾದ ವಿಜಯ್‌ಕುಮಾರ್, ಸೌಮ್ಯ, ಅಶ್ವಿನಿ, ನರಸಿಂಹಮೂರ್ತಿ, ಹಿರಿಯ ಯೋಗ ಶಿಕ್ಷಕ ಶಂಕರನಾರಾಯಣಶಾಸ್ತ್ರಿ , ಆಯುಷ್ ವೈದ್ಯಾಧಿಕಾರಿ ಡಾ.ಎಸ್.ಎನ್.ಲೋಕೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net