ಆರೋಗ್ಯ ಕಾಪಾಡಲು ಯೋಗ ಸಹಕಾರಿ: ಡಿಸಿ

yoga ayush elake
Published on

ಮಡಿಕೇರಿ: ಪ್ರತಿಯೊಬ್ಬರೂ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಯೋಗ ಸಹಕಾರಿಯಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದರು.


ನಗರದ ಗೌಡ ಸಮಾಜದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ವತಿಯಿಂದ ಮತ್ತು ವಿವಿಧ ಇಲಾಖೆ ಹಾಗೂ ಸಂಘಸಂಸ್ಥೆಗಳ ಸಹಯೋಗದಲ್ಲಿ ಯೋಗ ಫಾರ್ ಸೆಲ್ಫ್ ಅಂಡ್ ಸೊಸೈಟಿ ಹೆಸರಿನಲ್ಲಿ ನಡೆದ ಅಂತಾರಾಷ್ಟ್ರೀಯ ೧೦ನೇ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು.


ದೇಹ ಮತ್ತು ಮನಸ್ಸಿನ ನಡುವೆ ಸಮನ್ವಯ ಸಾಧಿಸಲು ಯೋಗಾಭ್ಯಾಸ ಅಗತ್ಯವಾಗಿದೆ. ಆರೋಗ್ಯವೇ ಭಾಗ್ಯವಾಗಿದ್ದು, ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಯೋಗ ಸಹಕಾರಿಯಾಗಿದೆ ಎಂದು ಹೇಳಿದರು.


ಯೋಗ/ ವ್ಯಾಯಾಮ ಮಾಡುವುದರಿಂದ ಪ್ರತಿನಿತ್ಯ ಚಟುವಟಿಕೆಯಿಂದ ಇರಲು ಸಾಧ್ಯ. ಆ ನಿಟ್ಟಿನಲ್ಲಿ ಉತ್ತಮ ಆರೋಗ್ಯಕ್ಕೆ ಯೋಗ ಮತ್ತು ವ್ಯಾಯಾಮ ಮಾಡುವುದು ಅತ್ಯಗತ್ಯ ಎಂದು ತಿಳಿಸಿದರು.


ಯೋಗ ಶಿಕ್ಷಕ ಮಹೇಶ್ ಕುಮಾರ್ ಮಾತನಾಡಿ, ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಹಲವು ದಿನಗಳಿಂದ ಯೋಗ ಪೂರ್ವಾಭ್ಯಾಸ ನಡೆಸಿ ಅಂತ ರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದರು.


ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾದೇವಿ ಮಾತನಾಡಿ, ಅಂತರಾಷ್ಟ್ರೀಯ ೧೦ ನೇ ಯೋಗ ದಿನಾಚರಣೆಗೆ ಸರ್ಕಾರದ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಸರ್ಕಾರೇತರ ಸಂಸ್ಥೆಯ ಪ್ರತಿನಿಧಿಗಳು ಹೀಗೆ ಎಲ್ಲರೂ ಜಿಲ್ಲಾಡಳಿತದ ಜೊತೆ ಕೈಜೋಡಿಸಿ ಯಶಸ್ಸುಗೊಳಿಸಿದ್ದಾರೆ ಎಂದು ತಿಳಿಸಿದರು.


ಯೋಗ ಶಿಕ್ಷಕರಾದ ಮಹೇಶ್ ಕುಮಾರ್ ಅವರು ಯೋಗಾಭ್ಯಾಸ ಶಿಕ್ಷಣ ನೀಡಿದರು. ಸೂರ್ಯ ನಮಸ್ಕಾರ, ವೃಕ್ಷಾಸನ, ಪಾದಹಸ್ತಾಸನ, ಉರ್ದ್ವಾಸನ, ತಾಡಾಸನ, ಅರ್ಧ ಮತ್ಸೇಂದ್ರಾಸನ, ಭುಜಂಗಾಸನ, ಪವನಮುಕ್ತಾಸನ, ಭದ್ರಾಸನ, ತ್ರಿಕೋನಾಸನ, ಉಷ್ಟ್ರಾಸನ, ವಜ್ರಾಸನ, ಶಲಭಾಸನ, ಶಶಾಂಕಾಸನ, ಮಂಡೂಕಾಸನ, ವಕ್ರಾಸನ, ಮಕರಾಸನ, ಸೇತುಬಂಧಾಸನ, ಉತ್ಥಾನ ಪಾದಾಸನ, ಅರ್ಧಹಲಾಸನ, ಶವಾಸನ, ಕಪಾಲಭಾತಿ, ಶೀತಲಿ ಪ್ರಾಣಾಯಾಮ, ಭ್ರಾಮರಿ ಪ್ರಾಣಾಯಾಮ, ಧ್ಯಾನ, ನಾಡಿಶೋಧ ಪ್ರಾಣಾಯಾಮ ಹೀಗೆ ಹಲವು ರೀತಿಯ ಯೋಗ ಮಾಡಲಾಯಿತು. ಮದೆನಾಡು ಬಿಜಿಎಸ್ ಶಾಲೆಯ ೫ನೇ ತರಗತಿ ವಿದ್ಯಾರ್ಥಿನಿ ಸಿಂಚನಾ ಅವರು ಯೋಗ ಪ್ರದರ್ಶನ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು.


ಡಿಸಿ, ಎಸ್ಪಿ, ಸಿಇಒ ಭಾಗಿ: ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ನಗರಸಭೆ ಮಾಜಿ ಅಧ್ಯಕ್ಷೆ ಅನಿತಾ ಪೂವಯ್ಯ, ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾ ದೇವಿ, ಯೋಗ ಶಿಕ್ಷಕರಾದ ಮಹೇಶ್ ಕುಮಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ನೀಮಾ ಜಿಲ್ಲಾ ಅಧ್ಯಕ್ಷ ಡಾ.ರಾಜಾರಾಮ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net