ಯೋಗೀಶ್ವರ್‌ಗೆ ಮಂತ್ರಿ ಸ್ಥಾನಕ್ಕೆ ಲಾಬಿ ಮಾಡಿಲ್ಲ - ರಮೇಶ ಜಾರಕಿಹೊಳಿ ಸ್ಪಷ್ಟನೆ

Ramesh_web
Published on

ಬೆಳಗಾವಿ: ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೀಶ್ವರ ಅವರನ್ನು ಮಂತ್ರಿ ಮಾಡಿಸಲು ನಾನು ಯಾವುದೇ ಲಾಬಿ ಮಾಡುತ್ತಿಲ್ಲ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಸ್ಪಷ್ಟಪಡಿಸಿದರು.

ಗೋಕಾಕ ನಗರದ ತಾಪಂ ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕೋವಿಡ್-19 ನಿಯಂತ್ರಣ ಹಾಗೂ ಪ್ರವಾಹದಿಂದ ಉಂಟಾದ ಹಾನಿಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ನಾನು ಹಾಗೂ ಯೋಗೀಶ್ವರ ಅವರು 1999ರಲ್ಲಿ ಮೊದಲಬಾರಿ ವಿಧಾನಸಭೆ ಪ್ರವೇಶಿಸಿದವರು. ವಿಧಾನ ಪರಿಷತ್ ಸದಸ್ಯರಾಗಿ ಅವರು ಆಯ್ಕೆಯಾದ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರಿಗೆ ಅಭಿನಂದನೆ ಸಲ್ಲಿಸಲು ನಾವುಗಳು ದೆಹಲಿಗೆ ಹೋಗಿದ್ದೆವು. ಅವರಿಗೆ ಸಚಿವ ಸ್ಥಾನ ಕೊಡಿಸಲು ಲಾಬಿ ಮಾಡಿಲ್ಲ ಎಂದು ತಿಳಿಸಿದರು.

ಡಿಕೆಶಿ ನನ್ನ ಮಿತ್ರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರಿಗೆ ಕರೊನಾ ವೈರಸ್ ದೃಢಪಟ್ಟಿದೆ. ಅವರು ನನ್ನ ಒಳ್ಳೆಯ ಮಿತ್ರ. ಕರೊನಾದಿಂದ ಬೇಗ ಗುಣಮುಖರಾಗಲಿ ಎಂದು ಹಾರೈಸುವುದಾಗಿ ತಿಳಿಸಿದರು. ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹದಿಂದ ಹಾನಿಯಾದ ಸ್ಥಳಗಳಿಗೆ ಭೇಟಿ ನೀಡಿ ಬೆಳೆ, ಆಸ್ತಿ, ಸರ್ಕಾರಿ ಕಟ್ಟಡಗಳ ಹಾನಿಗಳ ಬಗ್ಗೆ ಪರಿಶೀಲಿಸಿ ಕೂಡಲೇ ಸಮಗ್ರ ವರದಿ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಅಲ್ಲದೆ, ಕಳೆದ ವರ್ಷ ನೆರೆಯಿಂದ ಹಾನಿಗೊಳಗಾದ ಅನೇಕರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ಕೂಡಲೇ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸಿಎಂ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಲಾಗಿದ್ದು, ತಕ್ಷಣ ಸಮಸ್ಯೆ ಬಗೆಹರಿಸುವುದಾಗಿ ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net