

ಸರಗೂರು: ಮಾದಕ ವಸ್ತುಗಳ ಸೇವನೆಯಿಂದ ಯುವ ಜನಾಂಗ ಅಡ್ಡದಾರಿ ಹಿಡಿಯುತ್ತಿದೆ. ಇಂತಹ ಸಂದರ್ಭದಲ್ಲಿ ಯಾವುದೇ ದುಶ್ಚಟಗಳಿಗೆ ವಿದ್ಯಾರ್ಥಿಗಳು ಬಲಿಯಾಗದೆ ಸ್ವಾಸ್ಥೃ ಸದೃಢ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕಿ ಸಲ್ಮಾ ಹೇಳಿದರು.
ತಾಲೂಕಿನ ಹಂಚೀಪುರ ವಲಯದ ಕಾರ್ಯಕ್ಷೇತ್ರ ಸಾಗರೆ ಗ್ರಾಮದ ಪ್ರೌಢಶಾಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶನಿವಾರ ಹಮ್ಮಿಕೊಂಡಿದ್ದ ಸ್ವಾಸ್ಥೃ ಸಂಕಲ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಯುವಕರು, ವಿದ್ಯಾರ್ಥಿಗಳು ಸೇರಿದಂತೆ ಅನೇಕರು ಕ್ಷಣಿಕ ಸುಖದ ಭ್ರಮೆಯಲ್ಲಿ ಮಾದಕ ವಸ್ತುಗಳಿಗೆ ದಾಸರಾಗಿ ತಮಗೆ ಅರಿವಿಲ್ಲದಂತೆ ತಮ್ಮ ಬದುಕನ್ನು ನಾಶ ಮಾಡಿಕೊಳ್ಳುತ್ತಿರುವುದು ಸಾಮಾಜಿಕ ದುರಂತವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು
ಮಾದಕ ವಸ್ತುಗಳ ಸೇವನೆಯಿಂದ ದೇಹದ ಪ್ರತಿಯೊಂದು ಜೀವಕೋಶದ ಮೇಲೂ ದುಷ್ಪರಿಣಾಮ ಬೀರುತ್ತದೆ. ವಿಶ್ವದಾದ್ಯಂತ ಪ್ರತಿವರ್ಷ 5.4 ಮಿಲಿಯನ್ ಜನರು ತಂಬಾಕು ಸೇವನೆಯಿಂದ ಮೃತರಾಗುತ್ತಿದ್ದಾರೆ. ಅದರಲ್ಲಿ ನಮ್ಮ ಭಾರತದಲ್ಲಿ ಶೇ. 30ರಷ್ಟು ಜನ ಮಾದಕ ವಸ್ತುಗಳ ವ್ಯಸನಿಗಳಾಗಿರುವುದು ಕಳವಳದ ಸಂಗತಿಯಾಗಿದೆ ಎಂದರು.
ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ನಿಲಾರಾಣಿ ಮಾತನಾಡಿ, ಇದು ದೇಶವನ್ನು ಇನ್ನಷ್ಟು ಆರೋಗ್ಯ ಮತ್ತು ಆರ್ಥಿಕವಾಗಿ ಕುಗ್ಗಿಸುತ್ತದೆ. ಪ್ರಜ್ಞಾವಂತ ಯುವಕರು ದುಶ್ಚಟಗಳಿಗೆ ದಾಸರಾಗದೆ ಎಚ್ಚರಿಕೆಯಿಂದ ಇರಬೇಕು ಹಾಗೂ ಇದರ ಬಗ್ಗೆ ಪ್ರತಿಯೊಬ್ಬರು ಅರಿತು ಕೊಂಡು ಸುತ್ತಮುತ್ತಲಿನಲ್ಲಿರುವ ಮಾದಕ ವಸ್ತುಗಳ ಸೇವನೆ ಮಾಡುವವರಿಗೆ ಅರಿವು ಮೂಡಿಸಿ ನಮ್ಮ ಸಮಾಜವನ್ನು ರೋಗಮುಕ್ತವಾನ್ನಾಗಿ ಮಾಡುವುದಕ್ಕೆ ಪ್ರತಿಯೊಬ್ಬರು ಮುಂದಾಗಬೇಕು ಎಂದು ಮನವಿ ಮಾಡಿದರು.
ರಾಜ್ಯದ ನಾನಾ ಜಿಲ್ಲೆಗಳಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಚೇರಿ ಸ್ಥಾಪಿಸುವ ಮೂಲಕ ಶಿಕ್ಷಣ, ಆರೋಗ್ಯ, ಆರ್ಥಿಕ ಕ್ಷೇತ್ರದಲ್ಲಿ ಸಾಕಷ್ಟು ಅನುಕೂಲಗಳನ್ನು ಮಾಡಿಕೊಟ್ಟಿರುವುದು ಪ್ರಶಂಸನೀಯ. ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು, ಸ್ವಾಸ್ಥೃಸಮಾಜ ನಿರ್ಮಾಣಕ್ಕೆ ಬದ್ಧರಾಗಬೇಕು ಎಂದು ಸಲಹೆ ನೀಡಿದರು.
ಮಕ್ಕಳ ಮೇಲೆ ಬೀರುವ ದುಶ್ಚಟಗಳ ಬಗ್ಗೆ ಮತ್ತು ಬಾಲ್ಯ ವಿವಾಹದ ಬಗ್ಗೆ ವೈಯಕ್ತಿಕ ಶುಚಿತ್ವದ ಬಗ್ಗೆ ಮಾಹಿತಿ ನೀಡಿದರು.
ಶಾಲೆಯ ಮುಖ್ಯ ಶಿಕ್ಷಕ ಷಣ್ಮುಖ ಮಾತನಾಡಿ, ಸಮಾಜದಲ್ಲಿ ಆಳವಾಗಿ ಬೇರು ಬಿಟ್ಟಿರುವ ಮದ್ಯಪಾನ ಮುಂತಾದ ದುಶ್ಚಟಗಳು ಕುಟುಂಬಗಳ ಮೇಲೆ ದುಷ್ಪರಿಣಾಮವನ್ನು ಬೀರುತ್ತಿದೆ. ವಿದ್ಯಾರ್ಥಿಗಳು ಈ ಬಗ್ಗೆ ಜಾಗೃತರಾಗಿ ಕುಡಿತದಿಂದ ಹಾಳಾಗಿರುವ ಸಂಸಾರಗಳಿಗೆ ಬುದ್ಧಿವಾದ ಹೇಳುವ ಮಹತ್ಕಾರ್ಯಕ್ಕೆ ಮುಂದಾಗಬೇಕು ಎಂದರು.
ಸಹ ಶಿಕ್ಷಕ ಪರಶುಮೂರ್ತಿ, ಎಸ್ ಡಿಎಂಸಿ ಅಧ್ಯಕ್ಷ ಬೈರ ನಾಯ್ಕ, ವಲಯ ಮೇಲ್ವಿಚಾರಕಿ ಸಲೀಮಾ, ಸೇವಾ ಪ್ರತಿನಿಧಿ ನಿಂಗರಾಜಮ್ಮ ಇದ್ದರು.