

ಬೆಂಗಳೂರು ಗ್ರಾಮಾಂತರ: ನಿರುದ್ಯೋಗ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಯುವಕರಲ್ಲಿ ಕೌಶಲಾಭಿವೃದ್ಧಿ ತರಬೇತಿ ಬಗ್ಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಹೇಳಿದರು.
ದೇವನಹಳ್ಳಿ ತಾಲೂಕು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಕೌಶಲಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯಿಂದ ಹಮ್ಮಿಕೊಂಡಿದ್ದ ಪ್ರಧಾನಮಂತ್ರಿ ಕೌಶಲ ವಿಕಾಸ ಯೋಜನೆ 3.0 ಅನುಷ್ಠಾನ ಕುರಿತ ಸಭೆಯಲ್ಲಿ ಮಾತನಾಡಿದರು.
ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾಭ್ಯಾಸ ಮುಗಿಸಿ ಉದ್ಯೋಗ ಅರಸುತ್ತಿದ್ದಾರೆ. ಎಲ್ಲರಿಗೂ ಸ್ವಾವಲಂಬನೆ ಬದುಕು ರೂಪಿಸಿಕೊಳ್ಳುವ ತವಕ ಇರುತ್ತದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಇಂಥ ಯುವಪೀಳಿಗೆಗೆ ಕೌಶಲಾಭಿವೃದ್ಧಿ ತರಬೇತಿಗಳ ಬಗ್ಗೆ ಮಾರ್ಗದರ್ಶನ ನೀಡಬೇಕಿದೆ ಎಂದು ತಿಳಿಸಿದರು.
ತರಬೇತಿ ಕಾರ್ಯಕ್ರಮ ಆಯೋಜಿಸಿ ನಿರುದ್ಯೋಗಿಗಳನ್ನು ಗುರುತಿಸಿ, ಸೂಕ್ತ ತರಬೇತಿಯೊಂದಿಗೆ ಉದ್ಯೋಗಾವಕಾಶ ಕಲ್ಪಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ತರಬೇತಿ ಪಡೆದವರಿಗೆ ಸ್ಥಳೀಯ ಕಾರ್ಖಾನೆಗಳಲ್ಲಿ ಕೆಲಸ ನಿರ್ವಹಿಸುವ ಸಲುವಾಗಿ ಪ್ರಮಾಣ ಪತ್ರ ನೀಡುವುದು ಅತಿ ಮುಖ್ಯ. ಇದರಿಂದ ಅವರ ಮುಂದಿನ ಹಾದಿ ಸುಗಮವಾಗಲಿದೆ ಎಂದರು. ಯುವಪೀಳಿಗೆಯನ್ನು ಸಮಾಜದ ಮುಖ್ಯವಾಹಿನಿಗೆ ಕರೆತರಲು ಪ್ರಯತ್ನಿಸಬೇಕು. ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳನ್ನು ಗುರುತಿಸಿ, ಅವರ ಆಸಕ್ತಿಯ ವಿಷಯದಂತೆ ಕೌಶಲ ಅಭಿವೃದ್ಧಿಗೊಳಿಸುವಂತಹ ತರಬೇತಿ ನೀಡುವ ಜತೆಗೆ, ಸೂಕ್ತ ಸ್ಥಳದಲ್ಲಿ ಉದ್ಯೋಗ ದೊರಕಿಸಿಕೊಡುವುದು ಮುಖ್ಯ ಎಂದು ಡಿಸಿ ತಿಳಿಸಿದರು.
ಗ್ರಾಮ ಪಂಚಾಯಿತಿ ಹಂತದಲ್ಲಿ ಅಧಿಕಾರಿಗಳು ನಿರುದ್ಯೋಗಿಗಳಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು. ಕಾಲೇಜುಗಳಿಗೆ ತೆರಳಿ ವಿದ್ಯಾರ್ಥಿಗಳಲ್ಲಿ ಕೌಶಲಾಭಿವೃದ್ಧಿ ತರಬೇತಿಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಇದರಿಂದ ವಿದ್ಯಾರ್ಥಿಗಳು ಆಯ್ದುಕೊಳ್ಳುವ ಕ್ಷೇತ್ರಗಳ ಬಗ್ಗೆ ಸ್ಪಷ್ಟ ಅರಿವು ಮೂಡಲಿದೆ ಎಂದರು.
ಸಂಪೂರ್ಣ ಸಹಕಾರ: ಜಿಲ್ಲಾ ವ್ಯಾಪ್ತಿಯಲ್ಲಿನ ವೃತ್ತಿಪರ ಕಾಲೇಜುಗಳಿಗೆ ತೆರಳಿ ವಿದ್ಯಾರ್ಥಿಗಳಲ್ಲಿ ಕೌಶಲ ಹೆಚ್ಚಿಸುವ ಕಾರ್ಯ ಮಾಡುವ ಜತೆಗೆ ವಿದ್ಯಾರ್ಥಿಗಳನ್ನು ಸಬಲರನ್ನಾಗಿಸಬೇಕು. ಇಂತಹ ಕಾರ್ಯಕ್ರಮಗಳಿಗೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿಯಿಂದ ಸಂಪೂರ್ಣ ಸಹಕಾರ ದೊರೆಯಲಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿ ಕುಮಾರ್ ಭರವಸೆ ನೀಡಿದರು.
ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಲಕ್ಷ್ಮೀನಾರಾಯಣ ರಾಜು, ಜಿಲ್ಲೆಯಲ್ಲಿ ಕೈಗೊಂಡಿರುವ ತರಬೇತಿ ಕಾರ್ಯಗಳು, ಸಮಿತಿ ಮತ್ತು ಉಪಸಮಿತಿಗಳ ರಚನೆಯಲ್ಲಾಗಿರುವ ಪ್ರಗತಿ ಕುರಿತು ಮಾಹಿತಿ ನೀಡಿದರು.