ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ:
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ನಾಜಿ ನಾಯಕ ಹಿಟ್ಲರ್ಗೆ ಹೋಲಿಸಿ ಬಿಜೆಪಿ ಸಾಮಾಜಿಕ ಮಾಧ್ಯಮ ವಿಭಾಗ ಫೋಸ್ ಮಾಡಿದ್ದನ್ನು ಖಂಡಿಸಿ ಇಲ್ಲಿಯ ಅರವಿಂದನಗರದಲ್ಲಿರುವ ಬಿಜೆಪಿ ಕಚೇರಿಗೆ ಯುವ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಮುತ್ತಿಗೆ ಹಾಕಲು ಯತ್ನಿಸಿದರು.
ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅರ್ಜುನ ಪಾಟೀಲ ನೇತೃತ್ವದಲ್ಲಿ ಪ್ರತಿಭಟನೆ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಧಿಕ್ಕಾರ ಕೂಗಿದರು. ಬಿಜೆಪಿ ಪಕ್ಷದ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಇದಕ್ಕೆ ಅವಕಾಶ ನೀಡಗ ಪೊಲೀಸರು ಸುಮಾರು 50ರಷ್ಟು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದು, ನಂತರ ಬಿಡುಗಡೆ ಮಾಡಿದರು.
ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಅವರನ್ನು ಹಿಟ್ಲರ್ಗೆ ಹೋಲಿಸಿದ್ದು ಸರಿಯಲ್ಲ. ಸಾಮಾಜಿಕ ಮಾಧ್ಯಮದಲ್ಲಿ ಬಿಜೆಪಿ ಇಂತಹ ಹೇಳಿಕೆಯಿರುವ ಪೋಸ್ಟ್ ಮಾಡಿದ್ದು ತಕ್ಷಣ ಅಳಿಸಬೇಕು ಎಂದು ಅರ್ಜುನ ಪಾಟೀಲ ಆಗ್ರಹಿಸಿದರು.
ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸದಾನಂದ ಡಂಗನವರ, ಇತರರು ಇದ್ದರು.