

ಬೆಳಗಾವಿ: ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಾದ ನ್ಯಾಯ ಸಮ್ಮತ ಅಕ್ಕಿಯನ್ನು ನೀಡದೇ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್‌ನ ಯುವ ಘಟಕದ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಸಂಗೊಳ್ಳಿ ರಾಯಣ್ಣ ವೃತ್ತದ ಬಳಿಯ ಕಾಂಗ್ರೆಸ್ ಭವನದಲ್ಲಿ ಜಮಾಯಿಸಿದ ಪಕ್ಷದ ಕಾರ್ಯಕರ್ತರು, ಚನ್ನಮ್ಮ ವೃತ್ತದ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಚನ್ಮಮ್ಮ ವೃತ್ತದ ಬಳಿಯ ಕಾಡಾ ಕಚೇರಿಯಲ್ಲಿರುವ ಸಂಸದೆ ಮಂಗಲ ಅಂಗಡಿ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ರಾಜದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದರಿಂದ ಕೇಂದ್ರ ಸರ್ಕಾರವು ರಾಜ್ಯಕ್ಕೆ ಸಿಕಬೇಕಾದ ಅಕ್ಕಿ ಕೊಡುತ್ತಿಲ್ಲ. ರಾಜ್ಯದ ಪರವಾಗಿ ಧ್ವನಿ ಎತ್ತಬೇಕಾದ ಸಂಸದರು ಮೌನ ವಹಿಸಿದ್ದಾರೆ. ಕೇಂದ್ರ ಸರ್ಕಾರಕ್ಕೆ ಅಕ್ಕಿ ಕೊಡಿ ಎಂದು ಯಾರು ದೈರ್ಯವಾಗಿ ಮೋದಿ ಅವರ ಬಳಿ ಕೇಳುತ್ತಿಲ್ಲ. ಬಡವರ ಅಕ್ಕಿಯ ವಿಷಯದಲ್ಲಿಯೂ ಸರ್ಕಾರ ರಾಜಕೀಯ ಮಾಡುತ್ತಿರುವುದು ಸರಿಯಲ್ಲ ಎಂದು ದೂರಿದರು. ಕೇಂದ್ರ ಸರ್ಕಾರ ಉದ್ದೇಶ ಪೂರ್ವಕವಾಗಿ ರಾಜ್ಯಕ್ಕೆ ಅಕ್ಕಿ ನೀಡುತ್ತಿಲ್ಲ. ಅಲ್ಲದೆ, ರಾಜ್ಯ ಬಿಜೆಪಿ ಮುಖಂಡರು ಕೇಂದ್ರ ಸರ್ಕಾರದಿಂದ ಅಕ್ಕಿ ಕೊಡಿಸುವ ಬದಲು 10 ಕೆ.ಜಿ.ಅಕ್ಕಿ ಕೊಡಿ ಎಂದು ಮೊಸಳೆ ಕಣ್ಣೀರಿನ ಹೋರಾಟ ನಡೆಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಕಾರ್ತಿಕ ಪಾಟೀಲ ಮಾತನಾಡಿ, ಅಕ್ಕಿ ವಿತರಣೆಯಲ್ಲಿ ಕೇಂದ್ರ ಸರ್ಕಾರ ದ್ವೇಷ ರಾಜಕಾರಣಿ ಮತ್ತು ರಾಜ್ಯಕ್ಕೆ ಮಲತಾಯಿ ಧೋರಣೆ ಮಾಡುತಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು.
ಯಲ್ಲಪ್ಪ ಶಿಂಗೆ, ಬಂಡಿ ಶಿಲ್ಕೆ, ಗೋಪಾಲ ದಳವಾಯಿ ಇತರರು ಪ್ರತಿಭಟನೆ ನೇತೃತ್ವ ವಹಿಸಿದ್ದರು.