

ಮಂಡ್ಯ: ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಸಿರುವುದನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನೆಡೆಸಿದರು.
ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಕಾರರು, ತಲೆ ಮೇಲೆ ಗ್ಯಾಸ್ ಸಿಲಿಂಡರ್ ಹೊತ್ತು ಘೋಷಣೆ ಕೂಗಿದರು. ಮಾತ್ರವಲ್ಲದೆ ರಸ್ತೆಯಲ್ಲೇ ಸೌದೆ ಒಲೆ ಉರಿಸಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಿ ಬಡವರ ರಕ್ತ ಹೀರುತ್ತಿದೆ. ಇದರ ಬಗ್ಗೆ ಹೋರಾಟ ಮಾಡಬೇಕಾದ ಬಿಜೆಪಿ, ಕಾಂಗ್ರೆಸ್ ವಿರುದ್ಧ ಜನಾಕ್ರೋಶ ಯಾತ್ರೆ ಮಾಡುತ್ತಿರುವುದು ಹಾಸ್ಯಾಸ್ಪದವಾಗಿದೆ. ಇದು ಜನರ ಹಾದಿ ತಪ್ಪಿಸುವ ತಂತ್ರ ಎಂದು ಟೀಕಿಸಿದರು.
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ 2 ರೂ ಹಾಗೂ ಅಡುಗೆ ಅನಿಲದ ದರವನ್ನು 50 ರೂ ಏರಿಕೆ ಮಾಡಿದೆ. ಆದರೂ ಬಿಜೆಪಿ ಕಾರ್ಯ ಕರ್ತರು ಸಮರ್ಥಿಸುತ್ತಿರುವುದು ವಿಷಾದನೀಯ. ಕೇಂದ್ರ ಸರ್ಕಾರವು ಬಜೆಟ್‌ನಲ್ಲಿ ರಾಜ್ಯಕ್ಕೆ ಯಾವುದೇ ಯೋಜನೆ ರೂಪಿಸಿಲ್ಲ. ನಮ್ಮ ತೆರಿಗೆ ಪಾಲನ್ನು ನೀಡದೆ ದ್ವೇಷದ ರಾಜಕಾರಣ ಮಾಡುತ್ತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾತೈಲದ ಬೆಲೆ ಇಳಿಕೆ ಕಂಡಿದ್ದರೂ ದೇಶದಲ್ಲಿ ಇಂಧನದ ಬೆಲೆ ಏರಿಸಿರುವುದು ಕೇಂದ್ರ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿಯಾಗಿದೆ. ದರ ಏರಿಕೆ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ, ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶೈಲೇಂದ್ರಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ವಿ.ನಾಗರಾಜು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಂಜನಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್‌ಮಿತ್ರ, ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಸುನೀಲ್, ಗುರು ಆತ್ಮಾನಂದ, ಕನ್ನಲಿ ಚನ್ನಪ್ಪ, ಎಚ್.ಎಂ.ಉದಯ್‌ಕುಮಾರ್, ಚಿನಕುರಳಿ ರಮೇಶ್, ಅಭಿಲಾಷ್, ಮಂಜು, ದ್ಯಾವಣ್ಣ, ವೀಣಾ ಶಂಕರ್ ಇತರರಿದ್ದರು.