

ಮಂಡ್ಯ: ಪ್ರಸಕ್ತ ಸಾಲಿನಲ್ಲಿ ತೇರ್ಗಡೆಯಾದ ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಡಿಪ್ಲೊಮಾ ವಿದ್ಯಾರ್ಥಿಗಳ ಮಾಹಿತಿಯನ್ನು ಕಾಲೇಜು ಪ್ರಾಂಶುಪಾಲರು ನ್ಯಾಡ್ ಪೋರ್ಟಲ್ಗೆ ಅಪ್‌ಲೋಡ್ ಮಾಡಿಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಯುವನಿಧಿ ನೋಂದಣಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪದವಿ ಪೂರ್ವ ಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಉದ್ಯೋಗ ವಿನಿಮಯ ಕೇಂದ್ರಗಳ ಅಧಿಕಾರಿಗಳು ಯುವ ಯುವನಿಧಿ ಲಾಗಿನ್‌ನಲ್ಲಿ ಬಾಕಿ ಇರುವ ವಿದ್ಯಾರ್ಥಿಗಳ ಅರ್ಜಿಯನ್ನು ವಿಲೇ ಮಾಡಬೇಕು ಎಂದರು.
2023-24ನೇ ಸಾಲಿನ ಅಭ್ಯರ್ಥಿಗಳಿಗೆ ’ಯುವನಿಧಿ’ ಯೋಜನೆಯ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಿ. ವಿಶ್ವವಿದ್ಯಾನಿಲಯ ಮತ್ತು ಪ್ರತಿ ಕಾಲೇಜಿನಲ್ಲಿಯೂ ಯುವನಿಧಿ ಯೋಜನೆಗೆ ಸಂಬಂಧಿಸಿದಂತೆ ಸಹಾಯವಾಣಿ ಕೇಂದ್ರ ಸ್ಥಾಪಿಸುವುದು. ’ಯುವನಿಧಿ’ ಯೋಜನೆಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದು. ಯುವನಿಧಿ ಯೋಜನೆಯಡಿ ಅಭ್ಯರ್ಥಿಗಳು ನೋಂದಾಯಿಸಿಕೊಳ್ಳಲು ತಾಲೂಕು ಮಟ್ಟ ಹಾಗೂ ಕಾಲೇಜಿನಲ್ಲಿ ವಿಶೇಷ ನೋಂದಣಿ ಅಭಿಯಾನ ಪ್ರಾರಂಭಿಸಬೇಕು. 2023-24ನೇ ಸಾಲಿನಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಕಾಲೇಜು ಪ್ರಾಂಶುಪಾಲರು ಯುವನಿಧಿ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಬೇಕು. ಜಿಲ್ಲೆಯ ಎಲ್ಲ ತಾಲೂಕು ತಹಸೀಲ್ದಾರ್ ಮತ್ತು ತಾಪಂ ಇಒಗಳು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯಿತಿಗೆ ’ಯುವನಿಧಿ ಯೋಜನೆಗೆ’ ಅರ್ಹರಿರುವ ಅಭ್ಯರ್ಥಿಗಳು ನೋಂದಣಿ ಮಾಡಿಸಿಕೊಳ್ಳುವಂತೆ ವ್ಯಾಪಕ ಪ್ರಚಾರ ನಡೆಸಿ ಎಂದರು.
ಸಭೆಯಲ್ಲಿ ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ನಾಗರಾಜ್, ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಆರ್.ನಾಗನಂದ್ ಇದ್ದರು.