

ಶ್ರೀರಂಗಪಟ್ಟಣ: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಕಾಲ ಕಳೆಯುತ್ತಿದ್ದಾರೆ. ಇದನ್ನು ತಪ್ಪಿಸಿ ಉತ್ತಮ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಬೇಕು ಎಂದು ಶಾಸಕ ಎ.ಬಿ.ರಮೇಶ ಬಂಡಿಸಿದ್ದೇಗೌಡ ಸಲಹೆ ನೀಡಿದರು.
ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಶುಕ್ರವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಬೆಳಗೊಳ ಹೋಬಳಿ ಮಟ್ಟದ ಶಾಲೆಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು. ವೈಜ್ಞಾನಿಕ ಆವಿಷ್ಕಾರಗಳು ಹೆಚ್ಚಾದಂತೆ ಯುವಕರು ಅವುಗಳಿಗೆ ದಾಸರಾಗುತ್ತಿದ್ದಾರೆ. ಆತಂಕದ ಜತೆಗೆ ಅನಾರೋಗ್ಯವನ್ನು ಕಂಡುಕೊಳ್ಳುತ್ತಿದ್ದಾರೆ. ಹಾಗಾಗಿ ಜಾಲತಾಣಗಳಿಂದ ದೂರವಿದ್ದು, ಹೆಚ್ಚು ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಿ ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಪಿ.ಮಹೇಶ್, ಕಸಾಪ ತಾಲೂಕು ಅಧ್ಯಕ್ಷ ಎಂ.ಬಿ.ಕುಮಾರ್, ಬೆಳಗೊಳ ಸರ್ಕಾರಿ ಪ್ರೌಢಶಾಲೆ ಎಸ್‌ಡಿಎಂಸಿ ಅಧ್ಯಕ್ಷೆ ಉಷಾ, ಗ್ರಾಮ ಪಂಚಾಯಿತಿ ಸದಸ್ಯ ರವಿಕುಮಾರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಜೆ.ಶ್ರೀನಿವಾಸ್, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಚಂದ್ರು, ಸಿದ್ದರಾಜು, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸೀತಾರಾಮು, ಕರ್ನಾಟಕ ಜಾನಪದ ಪರಿಷತ್ತು ಅಧ್ಯಕ್ಷ ಸಿದ್ದಲಿಂಗು ಇದ್ದರು.