

ವಿಜಯವಾಣಿ ಸುದ್ದಿಜಾಲ ಧಾರವಾಡ
ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ಉತ್ತೀರ್ಣರಾದ ಜಿಲ್ಲೆಯ ವಿದ್ಯಾರ್ಥಿಗಳು ಯುವನಿಧಿ ಯೋಜನೆಗೆ ಹೆಸರು ನೋಂದಾಯಿಸಿಕೊಳ್ಳಲು ಅಗತ್ಯ ಮಾಹಿತಿ ನೀಡುವ ಭಿತ್ತಪತ್ರ ಹಾಗೂ ಪ್ರಚಾರ ಸಾಮಗ್ರಿಗಳನ್ನು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಿಡುಗಡೆ ಮಾಡಲಾಯಿತು.
ಜಿಲ್ಲಾಧಿಕಾರಿ ದಿವ್ಯ ಪ್ರಭು, ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಗೋಪಾಲ ಬ್ಯಾಕೋಡ ಹಾಗೂ ಇತರರು ಭಿತ್ತಿಪತ್ರ ಬಿಡುಗಡೆಗೊಳಿಸಿ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿದರು.
ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಉಪಪೊಲೀಸ್ ಆಯುಕ್ತ ಮಾನಿಂಗ ನಂದಗಾವಿ, ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಜಿಲ್ಲಾ ಕೌಶಲ ಅಭಿವೃದ್ಧಿ ಅಧಿಕಾರಿ ರವೀಂದ್ರ ದ್ಯಾಬೇರಿ, ಭೂ ದಾಖಲೆಗಳ ಇಲಾಖೆ ಉಪನಿರ್ದೇಶಕ ಮೋಹನ ಶಿವಣ್ಣನವರ, ವಿವಿಧ ಇಲಾಖೆ ಅಧಿಕಾರಿಗಳು, ಇತರರು ಇದ್ದರು.
ಯುವ ಜನತೆ ಭವಿಷ್ಯಕ್ಕಾಗಿ ಸರ್ಕಾರ ಗ್ಯಾರಂಟಿ ಯೋಜನೆ ಆರಂಭಿಸಿದೆ. ಯುವನಿಧಿ ಯೋಜನೆಯಡಿ ಪದವೀಧರರಿಗೆ 3 ಸಾವಿರ ರೂ. ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ 1500 ರೂ. ನಿರುದ್ಯೋಗ ಭತ್ಯೆಯನ್ನು 2 ವರ್ಷ ನೀಡಲಾಗುವುದು. 2024ರಲ್ಲಿ ಪದವಿ, ಡಿಪ್ಲೋಮಾ ತೇರ್ಗಡೆಯಾಗಿ 180 ದಿನ ನಿರುದ್ಯೋಗಿಗಳಾದವರು ಯೋಜನೆಗೆ ಅರ್ಹರು. ಯೋಜನೆ ಲಾಭ ಪಡೆಯಲು ಅಭ್ಯಥಿರ್ಗಳು ಸೇವಾ ಸಿಂಧು ಜಾಲತಾಣದಲ್ಲಿ ಅರ್ಜಿ ಸಲ್ಲಿಸಬಹುದು.