

ವಿಜಯವಾಣಿ ಸುದ್ದಿಜಾಲ ಬಂಟ್ವಾಳ
ಕ್ರೀಡೆಯಲ್ಲಿ ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸುವ ಮನೋಭಾವ ಬರುತ್ತದೆ. ದೈಹಿಕ ಆರೋಗ್ಯ ವೃದ್ಧಿಗೆ ಕ್ರೀಡೆ ಅಗತ್ಯ ಎಂದು ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಶಂಕರ್ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ, ಸರ್ಕಾರಿ ಪ್ರಾಥಮಿಕ ಶಾಲೆ ನೆಟ್ಲ, ಆಶ್ರಯದಲ್ಲಿ ನಡೆದ ಪ್ರಾಥಮಿಕ ಶಾಲಾ ಮಕ್ಕಳ ಕಲ್ಲಡ್ಕ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮಾತನಾಡಿದರು.
ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಭಾಸ್ಕರ್ ಕುಲಾಲ್ ಅಧ್ಯಕ್ಷತೆ ವಹಿಸಿ ಉದ್ಘಾಟಿಸಿದರು. ಗೋಳ್ತಮಜಲು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಜಯಂತ್, ಸದಸ್ಯ ದೀಪಕ್ ಕುಮಾರ್, ಶಂಬೂರು ಶಾಲಾ ಮುಖ್ಯಶಿಕ್ಷಕ ಜಯರಾಮ್, ಕಡೇಶಿವಾಲಯ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಭಾಸ್ಕರ್, ನೆಟ್ಲ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅನಿಲ್ ಕುಮಾರ್, ವಿನಯ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಲೋಕನಾಥ್ ಕುಲಾಲ್, ನೇರಳಕಟ್ಟೆ ಶಾಲಾ ದೈಹಿಕ ಶಿಕ್ಷಕಿ ಶೋಭಾ ಉಪಸ್ಥಿತರಿದ್ದರು.
ಪ್ರಭಾರ ಮುಖ್ಯಶಿಕ್ಷಕಿ ಶೋಭಲತಾ ಬಿ.ಸ್ವಾಗತಿಸಿ, ಕಂಪ್ಯೂಟರ್ ಶಿಕ್ಷಕಿ ಇಂದಿರಾ ವಂದಿಸಿ, ಸಹ ಶಿಕ್ಷಕ ಪ್ರವೀಣ್ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಕ್ರೀಡಾಕೂಟದ ನೆನಪಿಗಾಗಿ ಹಣ್ಣಿನ ಗಿಡ ನೆಟ್ಟು ಪಂದ್ಯಾಟ ಪ್ರಾರಂಭಿಸಲಾಯಿತು.
ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಪೆರಾಜೆ ಮಾಣಿ, ದ್ವಿತೀಯ ಸ್ಥಾನವನ್ನು ಸರ್ಕಾರಿ ಪ್ರಾಥಮಿಕ ಶಾಲೆ ಅನಂತಾಡಿ, ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಮಾಣಿ ಹಾಗೂ ದ್ವಿತೀಯ ಸ್ಥಾನವನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಂಬೂರು ಪಡೆದುಕೊಂಡಿತು.