

ಮಂಡ್ಯ: ಜಲಜೀವನ ಮಿಷನ್ ಯೋಜನೆಯಡಿ ಗ್ರಾಮಾಂತರ ಪ್ರದೇಶದ ಪ್ರತಿ ಮನೆಗೂ ನಲ್ಲಿ ಸಂಪರ್ಕ ಕಲ್ಪಿಸುವ ಕಾಮಗಾರಿಗಳ 108 ಡಿಪಿಆರ್‌ಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಶಾಂತಾ ಎಲ್.ಹುಲ್ಮನಿ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಮಿನಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಜಲ ಜೀವನ ಮಿಷನ್ ಯೋಜನೆ ಕುರಿತು ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಲ ಜೀವನ ಮಿಷನ್ ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಜಿಲ್ಲೆಯ ಎಲ್ಲ ಜನವಸತಿಗಳ ಹಾಗೂ ಕುಟುಂಬಗಳಿಗೂ ನಲ್ಲಿ ಸಂಪರ್ಕ ಕಲ್ಪಿಸಿ ಪ್ರತೀ ವ್ಯಕ್ತಿಗೂ ಕನಿಷ್ಠ 55 ಲೀಟರ್ ನೀರು ನೀಡಲು ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು.
ರಾಸಾಯನಿಕ ಗೊಬ್ಬರ ಬಳಕೆಯಿಂದ ಕೊಳವೆ ಬಾವಿಗಳ ನೀರಿನಲ್ಲಿ ನೈಟ್ರೇಟ್ ಮತ್ತು ಇತರೆ ರಾಸಾಯನಿಕ ಅಂಶಗಳು ಕಂಡುಬರುತ್ತಿದ್ದು, ಈ ಬಗ್ಗೆ ಮುನ್ನೆಚರಿಕೆ ವಹಿಸಬೇಕು. ಜಲ ಜೀವನ ಮಿಷನ್ ಯೋಜನೆಯ ಪ್ರಗತಿಯನ್ನು ತೀವ್ರಗೊಳಿಸಿ 2023ರ ಅಂತ್ಯದೊಳಗಾಗಿ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಎಲ್ಲ ಕುಟುಂಬಗಳಿಗೆ ನಲ್ಲಿ ಸಂಪರ್ಕ ಕಲ್ಪಿಸಲು ಕ್ರಮ ವಹಿಸಬೇಕು. ಸಾರ್ವಜನಿಕರು ಕೂಡ ಯೋಜನೆಯ ಅನುಷ್ಠಾನಕ್ಕೆ ಸಹಕಾರ ನೀಡಬೇಕು ಎಂದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ತಮ್ಮಣ್ಣ ಮಾತನಾಡಿ, ಪ್ರತೀ ಜನವಸತಿಗೆ ತಗಲುವ ವೆಚ್ಚದ ಅಂದಾಜು ಪಟ್ಟಿಯನ್ನು ಸಿದ್ಧಪಡಿಸಿ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯಲ್ಲಿ ಮಂಡಿಸಿ ಅನುಮೋದನೆ ನೀಡಬೇಕಾಗಿರುತ್ತದೆ. ಈಗ ಜಿಲ್ಲೆಯಲ್ಲಿ ಬ್ಯಾಚ್-3ರ ಕಾಮಗಾರಿಗಳ 108 ಡಿಪಿಆರ್‌ಗಳನ್ನು ಸರ್ಕಾರದ ಮಾರ್ಗಸೂಚಿಯಂತೆ ಸಿದ್ಧಪಡಿಸಲಾಗಿದ್ದು, ಅನುಮೋದನೆ ಪಡೆದು ಅನುಷ್ಠಾನಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಉಪಅರಣ್ಯ ಸಂರಕ್ಷಣಾಧಿಕಾರಿ ರುಥ್ರೇನ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಎನ್.ಧನಂಜಯ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ಎಸ್.ಎಚ್. ನಿರ್ಮಲಾ ಇತರರಿದ್ದರು.