ಅ. 17ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Published on

ಬಳ್ಳಾರಿ : ಜಿಲ್ಲಾಡಳಿತದಿಂದ ಮಹರ್ಷಿ ವಾಲ್ಮಿಕಿ ಜಯಂತಿಯನ್ನು ಅ.17ರಂದು ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಡಿಸಿ ಮಹಮ್ಮದ್ ಎನ್. ಝುಬೇರ್ ಹೇಳಿದರು.
ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮಹರ್ಷಿ ವಾಲ್ಮಿಕಿ ಜಯಂತಿ ಆಚರಣೆ ಹಿನ್ನೆಲೆ ಗುರುವಾರ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದರು. ಜಯಂತಿ ದಿನದಂದು ಎಸ್‌ಪಿ ವೃತ್ತದ ಬಳಿಯಿರುವ ಮಹರ್ಷಿ ವಾಲ್ಮೀಕಿ ಅವರ ಪ್ರತಿಮೆಗೆ ಮಾಲಾರ್ಪಣೆ ನೆರವೇರಿಸಿ, ವಿವಿಧ ಕಲಾ ತಂಡಗಳಿಂದ ಎಸ್‌ಪಿ ವೃತ್ತದಿಂದ ವಾಲ್ಮೀಕಿ ಭವನದವರೆಗೆ ಭವ್ಯ ಮೆರವಣಿಗೆಗೆ ನಡೆಯಲಿದೆ ಎಂದರು. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ, ಗಣ್ಯರನ್ನು ಆಹ್ವಾನಿಸಲಾಗುವುದು. ಕುಡಿಯುವ ನೀರಿನ ವ್ಯವಸ್ಥೆ, ಸ್ವಚ್ಛತಾ ಕಾರ್ಯ ಕೈಗೊಳ್ಳುವಂತೆ ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಸೂಚಿಸಿದರು. ವಿವಿಧ ಇಲಾಖೆ ಅಧಿಕಾರಿಗಳಿಗೆ ವಹಿಸಿದ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು. ಜಿಲ್ಲೆಯ ಪರಿಶಿಷ್ಟ ಪಂಗಡ ಸಮುದಾಯದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಅಧಿಕ ಅಂಕ ಪಡೆದವರಿಗೆ ಮತ್ತು ಪಿಹೆಚ್ ಡಿ ಪದವಿ ಪಡೆದವರಿಗೆ, ಹಾಗೆಯೇ ಸಮುದಾಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net