ಅ.21ರಂದು ಕಾವೇರಿ ನದಿ ಉತ್ಸವ

22Kush01
ಅಕ್ಟೋಬರ್ 21ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ನದಿ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲು ಮುಖ್ಯಮಂತ್ರಿ ಬಳಿ ತೆರಳಿದ ನಿಯೋಗದಲ್ಲಿ ಎಂ.ಎನ್. ಚಂದ್ರಮೋಹನ್, ರೀನಾ ಪ್ರಕಾಶ್, ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷ ಪೊನ್ನಪ್ಪ, ಮಣಿ ನಂಜಪ್ಪ ಇದ್ದು ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
Published on

ಕುಶಾಲನಗರ: ಕೊಡಗು ಜಿಲ್ಲೆಯಲ್ಲಿ ಕಾವೇರಿ ನದಿ ಉತ್ಸವ ಕಾರ್ಯಕ್ರಮವನ್ನು ಅ.21ರಂದು ಹಮ್ಮಿಕೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಪ್ಪಿಗೆ ನೀಡಿದ್ದು, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿಯೂ ಭರವಸೆ ನೀಡಿದ್ದಾರೆ.

ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ವತಿಯಿಂದ ಶಾಸಕ ಕೆ.ಜಿ.ಬೋಪಯ್ಯ ನೇತೃತ್ವದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಬೆಂಗಳೂರಿನಲ್ಲಿ ಇತ್ತೀಚೆಗೆ ಭೇಟಿ ಮಾಡಿದ ಸಂದರ್ಭ ಉತ್ಸವದಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದ್ದಾರೆ.

ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಸಹ ನದಿ ಉತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ 2021ರ ಡಿಸೆಂಬರ್ ತಿಂಗಳಲ್ಲಿ ನಡೆಯಬೇಕಾಗಿದ್ದ ಕಾವೇರಿ ನದಿ ಉತ್ಸವ ಕಾರಣಾಂತರಗಳಿಂದ ಮುಂದೂಲ್ಪಟ್ಟಿತ್ತು. ಅಕ್ಟೋಬರ್ 21ರಂದು ಕೊಡಗು ಜಿಲ್ಲೆಯ ತಲಕಾವೇರಿ, ಭಾಗಮಂಡಲ, ಕುಶಾಲನಗರ ವ್ಯಾಪ್ತಿಯಲ್ಲಿ ನದಿ ಉತ್ಸವ ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರನ್ನು ಭೇಟಿ ಮಾಡಿ ಮಾಹಿತಿ ನೀಡಲಾಯಿತು. ಈ ಹಿನ್ನೆಲೆಯಲ್ಲಿ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಉಸ್ತುವಾರಿ ಸಚಿವರು ನದಿ ಉತ್ಸವ ಕಾರ್ಯಕ್ರಮಕ್ಕೆ ಕೈಜೋಡಿಸುವಂತೆ ಸೂಚನೆ ನೀಡಿದ್ದಾರೆ.

ಕಾವೇರಿ ನದಿ ಸ್ವಚ್ಛತಾ ಆಂದೋಲನ ಪ್ರಮುಖರಾದ ಎಂ.ಎನ್.ಚಂದ್ರಮೋಹನ್, ರೀನಾ ಪ್ರಕಾಶ್, ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷ ಪೊನ್ನಪ್ಪ, ಮಣಿ ನಂಜಪ್ಪ, ಗಗನ್ ಗಣಪತಿ, ಪ್ರತೀಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net