ಅಂಗಡಿ, ಬೇಕರಿಗಳ ಮೇಲೆ ದಾಳಿ

23-kollegal-1,
Published on

ಕೊಳ್ಳೇಗಾಲ: ಕಳೆದ ಎರಡು ದಿನಗಳಿಂದ ಪಟ್ಟಣದಲ್ಲಿ ನಗರಸಭೆ ಅಧಿಕಾರಿಗಳು ಹೋಟೆಲ್, ಸ್ಟೇಷನರಿಗಳು, ಬೇಕರಿಗಳ ಮೇಲೆ ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡು, ದಂಡ ವಿಧಿಸಿದ್ದಾರೆ.

ನಗರಸಭೆ ಅಧ್ಯಕ್ಷೆ ರೇಖಾ ರಮೇಶ್ ನೇತೃತ್ವದಲ್ಲಿ ಹೆಲ್ತ್ ಇನ್ಸ್‌ಪೆಕ್ಟರ್ ಚೇತನ್, ಇತರ ಅಧಿಕಾರಿ ಹಾಗೂ ಸಿಬ್ಬಂದಿ ಪಟ್ಟಣದಾದ್ಯಂತ ಪ್ರದಕ್ಷಿಣೆ ಹಾಕಿ ಅಂಗಡಿ, ಮುಂಗಟ್ಟು, ಹೋಟೆಲ್, ಬೇಕರಿಗಳ ಮೇಲೆ ದಾಳಿ ನಡೆಸಿದ್ದಾರೆ. ಮಂಗಳವಾರ 145 ಕೆ.ಜಿ.ಪ್ಲಾಸ್ಟಿಕ್ ವಶಪಡಿಸಿಕೊಂಡು 14 ಸಾವಿರ ರೂ.ದಂಡ ವಿಧಿಸಿದ್ದಾರೆ. ಬುಧವಾರವೂ ಕಾರ್ಯಾಚರಣೆ ನಡೆಸಿದ್ದು, 130 ಕೆ.ಜಿ.ಪ್ಲಾಸ್ಟಿಕ್ ಜಪ್ತಿ ಮಾಡಿದ್ದಾರೆ. 12 ಸಾವಿರ ರೂ.ದಂಡ ವಿಧಿಸಿದ್ದಾರೆ. ಪ್ಲಾಸ್ಟಿಕ್ ಬಳಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ.

ಸಾಮಾನ್ಯ ಸಭೆಯಲ್ಲಿ ಭಾರಿ ಚರ್ಚೆ: ಅ.18ರಂದು ನಡೆದ ಸಾಮಾನ್ಯ ಸಭೆಯಲ್ಲಿ ಸದಸ್ಯ ಶಂಕನಪುರ ಪ್ರಕಾಶ್ ಪ್ಲಾಸ್ಟಿಕ್ ವಿಚಾರ ಪ್ರಸ್ತಾಪಿಸಿ ಮಾತನಾಡಿದ್ದರು. ಎಗ್ಗಿಲ್ಲದೆ ನಡೆಯುತ್ತಿರುವ ಪ್ಲಾಸ್ಟಿಕ್ ಬಳಕೆಯಿಂದ ಜನಸಾಮಾನ್ಯರು ಆನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಹೋಟೆಲ್‌ಗಳಲ್ಲಿ ಬಿಸಿ ಪದಾರ್ಥಗಳನ್ನು ಪ್ಲಾಸ್ಟಿಕ್ ನಲ್ಲಿ ಕಟ್ಟಿ ನೀಡುತ್ತಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಕ್ರಮವಹಿಸಬೇಕೆಂದು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ನಿಷೇಧ ಮಾಡಿದ ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕಬೇಕೆಂದು ಆರೋಗ್ಯ ಹಿರಿಯ ನಿರೀಕ್ಷಕ ಚೇತನ್ ಅವರಿಗೆ ಸೂಚಿಸಿದ್ದರು. ಅದರಂತೆ, ಅಧ್ಯಕ್ಷೆ ರೇಖಾ ರಮೇಶ್ ಹಾಗೂ ನಗರಸಭೆ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ನಗರಸಭೆ ಅಧ್ಯಕ್ಷೆ ರೇಖಾ ರಮೇಶ್, ಪರಿಸರ ವಿಭಾಗದ ಇಂಜಿನಿಯರ್ ಪ್ರಸನ್ನ, ಆರೋಗ್ಯ ಹಿರಿಯ ನಿರೀಕ್ಷಕ ಚೇತನ್, ಸೂಪರ್ ವೈಸರ್‌ಗಳಾದ ವಿನಯ್, ರಮೇಶ್, ರಾಘವೇಂದ್ರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net