

ಸಕಲೇಶಪುರ: ತಮಿಳುನಾಡಿಗೆ ನೀರು ಹರಿಸುತ್ತಿರುವುನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಬಂದ್ ಪಟ್ಟಣದಲ್ಲಿ ಸಂಪೂರ್ಣ ಬೆಂಬಲ ಸಿಕ್ಕಿತು.
ಶುಕ್ರವಾರ ಮುಂಜಾನೆಯಿಂದಲೇ ಅಂಗಡಿ-ಮುಂಗಟ್ಟುಗಳನ್ನು ತೆರೆಯದೆ ವರ್ತಕರು ಸ್ವಯಂಪ್ರೇರಿತರಾಗಿ ಬಂದ್‌ಗೆ ಬೆಂಬಲ ನೀಡಿದರು. ಬೆಳಗ್ಗೆ 10 ಗಂಟೆ ನಂತರ ಕರವೇ ಪ್ರವೀಣ್‌ಶೆಟ್ಟಿ ಬಣದ ಕಾರ್ಯಕರ್ತರು ಪಟ್ಟಣದಾದ್ಯಂತ ಸಂಚರಿಸಿ ಬಾಗಿಲು ತೆರೆದಿದ್ದ ಕೆಲವು ಅಂಗಡಿಗಳ ಬಾಗಿಲು ಮುಚ್ಚಿಸಿದರು. ನಂತರ ಶ್ರೀ ಸಕಲೇಶ್ವರಸ್ವಾಮಿ ದೇವಸ್ಥಾನದಿಂದ ಹಳೇ ಬಸ್ ನಿಲ್ದಾಣದವರೆಗೆ ಮೆರವಣಿಗೆ ನಡೆಸಿ ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.