

ಬೈಲಕುಪ್ಪೆ: ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಂಕದಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದ ಸುತ್ತಮುತ್ತ ಗಿಡಗಂಟಿಗಳು ಬೆಳೆದಿದ್ದು ಕಲಿಕೆಯ ಮಕ್ಕಳು ಹಾಗೂ ಪಾಲಕರಿಗೆ ಅಂಗನವಾಡಿ ಕೇಂದ್ರಕ್ಕೆ ಹೋಗಿ ಬರಲು ತುಂಬ ತೊಂದರೆಯಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಬೇಕು ಎಂದು ಇಲ್ಲಿನ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಗ್ರಾಮದ ಹೊರವಲಯದಲ್ಲಿರುವ ರಸ್ತೆಯಿಂದ ಅಂಗನವಾಡಿ ಕೇಂದ್ರಕ್ಕೆ ಮಕ್ಕಳು ಮತ್ತು ಪಾಲಕರು 1.5 ಮೀಟರ್ ನಡೆದುಕೊಂಡೇ ಹೋಗಬೇಕು. ಸುತ್ತಮುತ್ತ ಗಿಡಗಂಟಿಗಳು ಬೆಳೆದು ನಿಂತಿದ್ದು, ಹಾವು-ಹಲ್ಲಿಗಳ ಭಯದಿಂದ ಓಡಾಡಬೇಕಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.
ಅಂಗನವಾಡಿ ಕೇಂದ್ರದ ಶಿಕ್ಷಕಿ ಬೇಬಿ ಮಾತನಾಡಿ, ಗಿಡಗಂಟಿಗಳನ್ನು ಸ್ವಚ್ಛಗೊಳಿಸಬೇಕು ಎಂದು ನಾನು ಹಲವಾರು ಬಾರಿ ಅವರ್ತಿ ಗ್ರಾಮ ಪಂಚಾಯಿತಿಗೆ ಅರ್ಜಿ ನೀಡಿದ್ದೇನೆ. ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ದೂರಿದರು.
ಅವರ್ತಿ ಗ್ರಾಮ ಪಂಚಾಯಿತಿ ಪಿಡಿಒ ಸುರೇಶ್ ಮಾತನಾಡಿ, ಈಗಾಗಲೇ ಆಡಳಿತ ಮಂಡಳಿಯ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಸುಂಕದಹಳ್ಳಿ ಶಾಲೆ ಹಾಗೂ ಅಂಗನವಾಡಿ ಕೇಂದ್ರದ ಸುತ್ತ ಮತ್ತು ರಸ್ತೆ ಅಕ್ಕಪಕ್ಕ ಸ್ವಚ್ಛತೆ ಕಾರ್ಯಕ್ಕೆ ಮುಂದಾಗಬೇಕೆಂದು ನಿರ್ಣಯ ಕೈಗೊಳ್ಳಲಾಗಿದೆ. ಕೂಡಲೇ ಪರಿಶೀಲಿಸಿ ಸ್ವಚ್ಛತೆ ಮಾಡಿಸಲಾಗುವುದು ಎಂದು ತಿಳಿಸಿದ್ದಾರೆ.