

ಮೈಸೂರು: ನಗರದ ಹೃದಯ ಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿ ಅಪೂರ್ಣವಾಗಿರುವ ಹಿನ್ನೆಲೆಯಲ್ಲಿ ಸೋಮವಾರ ಸ್ಥಳ ಪರಿಶೀಲನೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಶೀಘ್ರ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.
ದೇವರಾಜ ಮೊಹಲ್ಲಾದಲ್ಲಿ ನಿರ್ಮಾಣ ಹಂತದಲ್ಲಿರುವ ಅಂಬೇಡ್ಕರ್ ಭವನ ಕಾಮಗಾರಿಗೆ ಅಗತ್ಯವಿರುವ ಅನುದಾನ ಹೊಂದಿಸುವ ಬಗ್ಗೆ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಬಾಕಿ ಉಳಿದಿರುವ ಕಟ್ಟಡ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮಕೈಗೊಳ್ಳಬೇಕು ಎಂದರು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಭವನ ನಿರ್ಮಾಣದ ಜವಾಬ್ದಾರಿ ವಹಿಸಲಾಗಿದ್ದು, ಪ್ರಸ್ತುತ ನಿರ್ಮಾಣ ಕಾಮಗಾರಿಯು ಶೇ.75 ಮುಗಿದಿದೆ. ಬಾಕಿ ಕಾಮಗಾರಿಯನ್ನು ಕೈಗೊಳ್ಳಲು ಸೂಕ್ತ ತಾಂತ್ರಿಕ ಸಮರ್ಥನೆಯೊಂದಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಭವನವನ್ನು ಸ್ವಚ್ಛಗೊಳಿಸಬೇಕು. ಸುತ್ತಲೂ ಬೆಳೆದಿರುವ ಗಿಡಗಂಟಿಗಳನ್ನು ತೆರವುಗೊಳಿಸಿ, ಯಾವುದೇ ಅನೈತಿಕ ಚಟುವಟಿಕೆಗೆ ಅವಕಾಶ ಮಾಡಿಕೊಡಬಾರದು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಭೇಟಿಗೂ ಮುನ್ನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ 10 ಕೋಟಿ ರೂ., ಮುಡಾದಿಂದ 9.5 ಕೋಟಿ ರೂ., ಮಹಾನಗರ ಪಾಲಿಕೆಯಿಂದ 2.5 ಕೋಟಿ ರೂ. ಅನುದಾನವನ್ನು ಅಂಬೇಡ್ಕರ್ ಭವನ ಕಾಮಗಾರಿ ಪೂರ್ಣಗೊಳಿಸಲು ನೀಡುವಂತೆ ತೀರ್ಮಾನಿಸಲಾಯಿತು.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್, ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಡಾ.ರಾಕೇಶ್ ಕುಮಾರ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಮುಡಾ ಆಯುಕ್ತ ದಿನೇಶ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಅಸಾದ್ ಉರ್ ರೆಹಮಾನ್ ಶರೀಫ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ.ಎಂ.ಕೃಷ್ಣರಾಜು ಇತರರು ಇದ್ದರು.