

ಮೈಸೂರು: ನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶೀಘ್ರವೇ ಚಾಲನೆ ನೀಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ.ರಾಮುಲು ಹೇಳಿದರು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ ಸಂಬಂಧ ಬೆಂಗಳೂರಿನ ವಿಕಾಸಸೌಧದಲ್ಲಿ ಶನಿವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು.
ಭವನ ನಿರ್ಮಾಣ ಸಂಬಂಧ ಹಿಂದಿನ ಪ್ರಸ್ತಾವನೆಗಳು ಸೇರಿ ಈಗಿರುವ ನ್ಯೂನತೆಗಳನ್ನು ಸರಿಪಡಿಸಲಾಗುವುದು. ಅದಕ್ಕಾಗಿ ಸಂಪುಟ ಸಭೆಗೆ ಅನುಮೋದನೆಗಾಗಿ ಕ್ರಿಯಾ ಯೋಜನೆ ಸಲ್ಲಿಸಬೇಕು. ಅಲ್ಲದೆ, ಬಹಳ ವರ್ಷಗಳ ಬೇಡಿಕೆ ಇರುವುದರಿಂದ ಶೀಘ್ರದಲ್ಲಿ ಚಾಲನೆ ನೀಡುವ ಬಗ್ಗೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಸೂಚಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್, ಶಾಸಕರಾದ ಜಿ.ಟಿ.ದೇವೇಗೌಡ, ತನ್ವೀರ್‌ಸೇಠ್, ಎಲ್.ನಾಗೇಂದ್ರ, ಹರ್ಷವರ್ಧನ್, ಮುಡಾ ಆಯುಕ್ತ ನಟೇಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಜರಿದ್ದರು.
ನ.6ರಂದು ವಿಜಯವಾಣಿ ಸಂಚಿಕೆಯಲ್ಲಿ ‘ಅಂಬೇಡ್ಕರ್ ಭವನಕ್ಕೆ ಗ್ರಹಣ’ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟವಾಗಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸಭೆ ಆಯೋಜಿಸಿ ಈ ವಿಷಯ ಚರ್ಚಿಸಲಾಗಿದೆ.