

ಹನೂರು: ತಾಲೂಕಿನ ಮಲೆ ಮಹದೇಶ್ವರಬೆಟ್ಟದ ಹುಲಿಗೂಡು- ತಂಬಡೀಗೇರಿ ಮಾರ್ಗದಲ್ಲಿ ಮಂಗಳವಾರ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದು, 576 ಮದ್ಯದ ಪೌಚ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ತಾಲೂಕಿನ ವಡ್ಡರದೊಡ್ಡಿ ಗ್ರಾಮದ ಎ.ಜೇಮ್ಸ್ (61) ಬಂಧಿತ ಆರೋಪಿ. ಈತ ಬೆಳಗ್ಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಬೈಕ್‌ನಲ್ಲಿ ಮದ್ಯ ಸಾಗಿಸುತ್ತಿದ್ದನು. ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಇನ್ಸ್‌ಪೆಕ್ಟರ್ ಜಗದೀಶ್ ಅವರು ಎಸ್ಪಿ ಡಾ.ಬಿ.ಟಿ.ಕವಿತಾ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿಯೊಂದಿಗೆ ದಾಳಿ ನಡೆಸಿ ಪರಿಶೀಲಿಸಿದಾಗ ಅಕ್ರಮವಾಗಿ ಮದ್ಯ ಸಾಗಿಸುತ್ತಿರುವುದು ದೃಢಪಟ್ಟಿದೆ. ಬಳಿಕ 576 ಮದ್ಯದ ಪೌಚ್‌ಗಳನ್ನು (51.840 ಲೀಟರ್) ವಶಕ್ಕೆ ಪಡೆದ ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಈ ಸಂಬಂಧ ಇನ್ನೂ ಐವರ ಮೇಲೆ ಮ.ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕಾರ್ಯಕ್ಕೆ ಎಸ್ಪಿ ಡಾ.ಬಿ.ಟಿ.ಕವಿತಾ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ದಾಳಿಯಲ್ಲಿ ಸಿಬ್ಬಂದಿ ಸಿದ್ದರಾಜು, ಸಿದ್ದರಾಮಯ್ಯ, ರಮೇಶ್‌ಕುಮಾರ್ ಮತ್ತಿತರರು ಭಾಗವಹಿಸಿದ್ದರು.