ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
Published on

ಹಾಸನ: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ಜನಸಾಮಾನ್ಯರ ಹಿತ ನಿರ್ಲಕ್ಷಿಸಿ ಅಡುಗೆ ಅನಿಲ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಸುತ್ತಿವೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಬಿ.ಎಂ. ರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಮೆರವಣಿಗೆ ಹೊರಟ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಆಗಮಿಸಿದರು. ಜಿಲ್ಲಾಧಿಕಾರಿ ಕಚೇರಿ ಕೊಠಡಿ ಎದುರು ಕೆಲಕಾಲ ಧರಣಿ ನಡೆಸಿ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಇ.ಎಚ್. ಲಕ್ಷ್ಮಣ್, ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ವ್ಯಾಪಕ ಭ್ರಷ್ಟಾಚಾರದಲ್ಲಿ ಮುಳುಗಿವೆ. ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸಿ ಜನರ ಜೀವ ಹಿಂಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜನರ ಆದಾಯ ದ್ವಿಗುಣ ಮಾಡಲಾಗುವುದು ಎಂಬ ಭರವಸೆ ನೀಡಿ ಅಧಿಕಾರಕ್ಕೇರಿದ ಪ್ರಧಾನಿ ನರೇಂದ್ರ ಮೋದಿ ಅವರು ನಿತ್ಯ ಜನರ ಜೇಬಿಗೆ ಕತ್ತರಿ ಹಾಕುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.
ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರ ಲಂಚ ಪಡೆಯುತ್ತಿದ್ದಾಗ ಲೋಕಾಯಕ್ತ ಪೊಲೀಸರ ಬಲೆಗೆ ಬಿದ್ದಿರುವುದು ರಾಜ್ಯ ಸರ್ಕಾರ ವ್ಯಾಪಕ ಭ್ರಷ್ಟಾಚಾರದಲ್ಲಿ ಮುಳುಗಿರುವುದಕ್ಕೆ ಸಾಕ್ಷಿ ಒದಗಿಸಿದೆ. ಈ ಪ್ರಕರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ದೇವರಾಜೇಗೌಡ, ಕೆಪಿಸಿಸಿ ಮಾಜಿ ಸದಸ್ಯ ಎಚ್.ಕೆ. ಮಹೇಶ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ತಾರಾ ಚಂದನ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಗೊರೂರು ರಂಜಿತ್, ಜಿಪಂ ಮಾಜಿ ಸದಸ್ಯ ಮಲ್ಲಿಗೆವಾಳು ದೇವಪ್ಪ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net