ಗುಂಡ್ಲುಪೇಟೆ: ತಾಲೂಕಿನ ಅಂಕಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಅಡುಗೆ ಸಿಬ್ಬಂದಿ ನಿಯೋಜಿಸುವಂತೆ ಬೊಮ್ಮಲಾಪುರ ಗ್ರಾಮ ಪಂಚಾಯಿತಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು ತಮಗೆ ಬೇಕಾದವರನ್ನು ನೇಮಿಸಲು ಕಿತ್ತಾಡುತ್ತಿದ್ದಾರೆ. ಇದರಿಂದ ಇಬ್ಬರ ನಡುವೆ ಭಿನ್ನಾಭಿಪ್ರಾಯದಿಂದ ಶಾಲೆಗೆ ಅಡುಗೆ ಸಿಬ್ಬಂದಿ ನೇಮಕವಾಗದೆ ಅಕ್ಷರ ದಾಸೋಹ ಯೋಜನೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸರಬರಾಜಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ಹಲವಾರು ಬಾರಿ ಗ್ರಾಮ ಪಂಚಾಯಿತಿಗೆ ಮನವರಿಕೆ ಮಾಡಿದ್ದರೂ ಯಾವುದೇ ಉಪಯೋಗವಾಗಿಲ್ಲ. ಆದ್ದರಿಂದ ಯಾರಾದರೂ ಅರ್ಹ ಬಡ ಅಭ್ಯರ್ಥಿಯನ್ನು ನೇಮಕ ಮಾಡಬೇಕು ಎಂದು ಒತ್ತಾಯಿಸಿ ಗ್ರಾಮ ಪಂಚಾಯಿತಿ ಕಚೇರಿ ಎದುರು ಧರಣಿ ನಡೆಸಿದರು. ಸ್ಥಳಕ್ಕೆ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಎಂ.ಪಿ. ಮಂಜಣ್ಣ ಭೇಟಿ ನೀಡಿ ಮುಂದಿನ ವಾರದ ಒಳಗೆ ನೇಮಕಾತಿ ಮಾಡಿಕೊಳ್ಳುವ ಭರವಸೆ ನೀಡಿದ ನಂತರ ಪ್ರತಿಭಟನೆ ಕೈಬಿಡಲಾಯಿತು. ಗ್ರಾಪಂ ಮಾಜಿ ಸದಸ್ಯ ಶಿವನಾಗಪ್ಪ, ವಹೇಂದ್ರ, ಮಾದೇಶ, ರಾಜಶೇಖರ್. ಮೃತ್ಯುಂಜಯ ಹಾಗೂ ಇತರರು ಭಾಗವಹಿಸಿದ್ದರು.