

ಬೆಳಗಾವಿ: ಧಾರಾಕಾರ ಮಳೆಯಿಂದ ಉಂಟಾಗಿರುವ ಅತಿವೃಷ್ಟಿಗೆ ಜಿಲ್ಲೆಯಲ್ಲಿ 255 ಕೋಟಿ ರೂ. ನಷ್ಟು ಹಾನಿಯಾಗಿರುವ ಕುರಿತು ಅಂದಾಜಿಸಲಾಗಿದೆ. ಸಂತ್ರಸ್ತರಿಗೆ 24 ಗಂಟೆಗಳಲ್ಲಿಯೇ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಹಾಗೂ ಕೈಗೊಳ್ಳಲಾದ ಕ್ರಮಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಹಾನಿಯಾಗಿರುವ ಕುರಿತು ಕೂಡಲೇ ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಬೇಕು. ಎನ್ಡಿಆರ್ಎಫ್ ಮಾರ್ಗಸೂಚಿ ಪ್ರಕಾರ ಹಾನಿಯ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕಳುಹಿಸಬೇಕು. ಮನೆಹಾನಿಯಾದ ಸಂತ್ರಸ್ತ ಕುಟುಂಬಗಳಿಗೆ 24 ಗಂಟೆಗಳಲ್ಲಿ ಪರಿಹಾರ ನೀಡಬೇಕು ಎಂದರು.
ಆಸ್ಪತ್ರೆಗಳಿಗೆ ಸೌಲಭ್ಯ ಕಲ್ಪಿಸಿ: ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಸೌಲಭ್ಯದ ಹಾಸಿಗೆಗಳು, ಆಕ್ಸಿಜನ್ ಟಕ ಸೇರಿ ಎಲ್ಲ ರೀತಿಯ ಸೌಲಭ್ಯ ಒದಗಿಸಬೇಕು. ಆಸ್ಪತ್ರೆಯಲ್ಲಿ ರೋಗಿಗಳಿಗೆ ನಿಗದಿತ ಸಮಯದಲ್ಲಿ ಚಿಕಿತ್ಸೆ ಸಿಗಬೇಕು. ಕೋವಿಡ್ ಪ್ರಕರಣ ಹೆಚ್ಚುತ್ತಿವೆ. ಅಲ್ಲದೆ, ನೆರೆಯ ರಾಜ್ಯದ ಮಕ್ಕಳಲ್ಲಿ ಸಾಂಕ್ರಾಮಿಕ ರೋಗಗಳು ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ವೈದ್ಯರು ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.
2 ವರ್ಷಗಳಿಂದ ಜಿಲ್ಲೆಯಲ್ಲಿ ನಡೆಯುತ್ತಿರುವ ಜಲಜೀವನ ಮಿಷನ್ ಕಾಮಗಾರಿಗಳನ್ನು ನಿಗದಿತ ಸಮಯದಲ್ಲೇ ಪೂರ್ಣಗೊಳಿಸಬೇಕು. ಕಾಮಗಾರಿ ಪೂರ್ಣಗೊಳ್ಳುವವರೆಗೆ ಹಳೆಯ ನಳಗಳ ಸಂಪರ್ಕ ಮುಂದುವರಿಸಬೇಕು ಎಂದು ಸೂಚಿಸಿದರು. ಡಿಸಿ ನಿತೇಶ ಪಾಟೀಲ, ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ, ದರ್ಶನ ಎಚ್.ವಿ., ಎಸ್ಪಿ ಡಾ.ಸಂಜೀವ ಪಾಟೀಲ, ಅಶೋಕ ದುಡಗುಂಟಿ, ಪಾಲಿಕೆ ಆಯುಕ್ತ ಡಾ.ರುದ್ರೇಶ ಘಾಳಿ, ಎಸಿಗಳಾದ ರವೀಂದ್ರ ಕರಲಿಂಗಣ್ಣವರ, ಸಂತೋಷ ಕಾಮಗೌಡ, ಡಿಎಚ್ಒ ಡಾ.ಮಹೇಶ ಕೋಣಿ ಇತರರಿದ್ದರು.
ಬಳ್ಳಾರಿ ನಾಲಾ ಸಮಸ್ಯೆ ಶಾಶ್ವತ ಪರಿಹಾರಕ್ಕೆ ಕ್ರಮ ವಹಿಸಿ: ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಬಳ್ಳಾರಿ ನಾಲಾ ನಿರ್ವಹಣೆಯನ್ನು ಪಾಲಿಕೆ ಹಾಗೂ ಉಳಿದ ಕಡೆಗಳಲ್ಲಿ ನೀರಾವರಿ ಇಲಾಖೆ ನಿರ್ವಹಿಸಬೇಕು. ಪಾಲಿಕೆ ವ್ಯಾಪ್ತಿಯಲ್ಲಿ 35 ಕಿಮೀ ಹರಿವು ಇರುತ್ತದೆ. ಅದನ್ನು ಪಾಲಿಕೆ ನಿರ್ವಹಿಸಲು ಕ್ರಮ ಕೈಗೊಳ್ಳಬೇಕು. ನಾಲಾ ಅಕ್ಕಪಕ್ಕದ ಮನೆಗಳಿಗೆ ಹಾಗೂ ಬೆಳೆಗಳಿಗೆ ಹಾನಿಯಾಗದಂತೆ ನೋಡಿಕೊಳ್ಳಬೇಕು. ನಾಲಾ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿಯಲು ಅನುಕೂಲವಾಗುವಂತೆ ಸಮಗ್ರ ಯೋಜನಾ ವರದಿ (ಡಿಪಿಆರ್) ರೂಪಿಸಬೇಕು ಎಂದು ಸಚಿವ ಗೋವಿಂದ ಕಾರಜೋಳ ನೀರಾವರಿ ಇಲಾಖೆ ಇಂಜಿನಿಯರ್ಗೆ ಸೂಚನೆ ನೀಡಿದರು.