

ಗುಂಡ್ಲುಪೇಟೆ: ತಾಲೂಕಿನ ಕೊಡಸೋಗೆ ಗ್ರಾಮದಲ್ಲಿ ಚೆಲುವನಾರಾಯಣಸ್ವಾಮಿ ಜಾತ್ರೆ ಭಾನುವಾರ ವಿಜೃಂಭಣೆಯಿಂದ ನಡೆಯಿತು.
ಎರಡು ವರ್ಷಗಳಲ್ಲಿ ಕರೊನಾ ಕಾರಣದಿಂದ ಸ್ಥಗಿತವಾಗಿದ್ದ ಜಾತ್ರೆಯನ್ನು ಈ ಬಾರಿ ವಿಜೃಂಭಣೆಯಿಂದ ಆಚರಿಸಲಾಯಿತು. ಶನಿವಾರ ರಾತ್ರಿ ಚೆಲುವನಾರಾಯಣಸ್ವಾಮಿ ಹಾಗೂ ತುಳಸಿಯಮ್ಮನವರ ಉತ್ಸವ ಮೂರ್ತಿಗಳನ್ನು ಗರುಡ ವಾಹನದ ಮೇಲೆ ಪ್ರತಿಷ್ಠಾಪಿಸಿ ಮಂಗಳವಾದ್ಯಗಳು, ಜನಪದ ಕಲಾತಂಡಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಆಹೊರಾತ್ರಿ ಹರಿಕಥಾ, ತುಳಸಿ ಕಲ್ಯಾಣೋತ್ಸವ ಕಾರ್ಯಕ್ರಮಗಳು ನಡೆದವು.
ಭಾನುವಾರ ಬೆಳಗ್ಗೆ ಮತ್ತೊಮ್ಮೆ ಉತ್ಸವ ಮೂರ್ತಿಗಳ ಮೆರವಣಿಗೆ ಮಾಡಲಾಯಿತು. ಪ್ರತಿಯೊಂದು ಮನೆಗಳವರು ಹಾಗೂ ಭಕ್ತರು ಪೂಜೆ ಸಲ್ಲಿಸಿ ತಮ್ಮ ಭಕ್ತಿಭಾವ ಮೆರೆದರು.