ಅಧಿಕಾರಿಗಳು ದಕ್ಷತೆಯಿಂದ ಸೇವೆ ಸಲ್ಲಿಸಿ: ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ತಾಕೀತು

04Tmk_Minister_Meeting
Published on

ತುಮಕೂರು: ಜನಪರ ಕಲ್ಯಾಣ ಕಾರ್ಯಕ್ರಮಗಳನ್ನು ತಳಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ದಕ್ಷತೆ ಹಾಗೂ ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ತಾಕೀತು ಮಾಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಪೂರ್ವ ಮುಂಗಾರು ಮಳೆ, ಬಿತ್ತನೆ ಬೀಜ, ಗೊಬ್ಬರ ದಾಸ್ತಾನು, ಕೋವಿಡ್​ ಪರಿಸ್ಥಿತಿ ಮತ್ತಿತರ ವಿಷಯಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮಳೆ ಚುರುಕಾಗುತ್ತಿದ್ದು ಜಿಲ್ಲೆಯ ರೈತರಿಗೆ ತೊಂದರೆಯಾಗದಂತೆ ಸಕಾಲದಲ್ಲಿ ಬಿತ್ತನೆ ಬೀಜ, ಗೊಬ್ಬರ ಪೂರೈಕೆಯಾಗಬೇಕು. ಶೇಂಗಾ ಬಿತ್ತನೆ ಬೀಜದ ಕೊರತೆಯಾಗದಂತೆ ಗುಣಮಟ್ಟದ ಬಿತ್ತನೆ ಬೀಜ ಖರೀದಿಸಬೇಕು ಹಾಗೂ ಬಿತ್ತನೆ ಬೀಜ, ಗೊಬ್ಬರ ದಾಸ್ತಾನಿಗೆ ಒತ್ತುಕೊಡಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಕೃಷಿ ಜಂಟಿ ನಿರ್ದೇಶಕಿ ರಾಜಸುಲೋಚನಾ ಸಭೆಗೆ ಮಾಹಿತಿ ನೀಡಿ, ಬಿತ್ತನೆ ಬೀಜ, ರಸಗೊಬ್ಬರಗಳನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಮಾಡಲಾಗಿದೆ ಎಂದು ತಿಳಿಸಿದರು.

ಕೋವಿಡ್​ ಮುನ್ನೆಚ್ಚರಿಕೆ: ಜನಸಾಮಾನ್ಯರಿಗೆ ಆರೋಗ್ಯ ರಕ್ಷಣೆ ದುಬಾರಿಯಾಗಿರುವ ಈ ಕಾಲಟ್ಟದಲ್ಲಿ ಆಯುಷ್ಮಾನ್​ ಭಾರತ್​ ಆರೋಗ್ಯ ಕರ್ನಾಟಕದಂತಹ ಯೋಜನೆಗಳು ಜನಸಾಮಾನ್ಯರಿಗೆ ತಲುಪುತ್ತಿರುವುದು ಒಂದು ವರದಾನವಾಗಿದೆ. ಜಿಲ್ಲೆಯ ವೈದ್ಯಾಧಿಕಾರಿಗಳು ದೇಶದ ವಿವಿಧ ಭಾಗದ ವೈದ್ಯಾಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅಲ್ಲಿನ ಕೋವಿಡ್​ ಸ್ಥಿತಿಗಳ ಬಗ್ಗೆ ಅವಲೋಕಿಸಿ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಚಿವ ಆರಗ ಸಲಹೆಯಿತ್ತರು.

ಜಿಲ್ಲಾ ಆರ್​ಸಿಎಚ್​ ಅಧಿಕಾರಿ ಡಾ.ಕೇಶವರಾಜ್​ ಮಾತನಾಡಿ, ಜಿಲ್ಲೆಯಲ್ಲಿ ಹೊಸ ಕೋವಿಡ್​ ಪ್ರಕರಣಗಳು ವರದಿಯಾಗದಿದ್ದರೂ ಮುನ್ನೆಚ್ಚರಿಕೆ ಕ್ರಮವಾಗಿ 1500 ಹಾಸಿಗೆಗಳನ್ನು ಸಿದ್ಧಪಡಿಸಲಾಗಿದೆ. ಜಿಲ್ಲೆಯ ಎಲ್ಲ ತಾಲೂಕು ಆಸ್ಪತ್ರೆಗಳಲ್ಲೂ ಆಕ್ಸಿಜನ್​ ಟಕಗಳನ್ನು ಸುಸ್ಥಿತಿಯಲ್ಲಿ ಇಡಲಾಗಿದೆ. ತುಮಕೂರು, ತಿಪಟೂರು ಹಾಗೂ ಶಿರಾ ತಾಲೂಕುಗಳಲ್ಲಿ 3 ಆರ್​ಟಿಪಿಸಿಆರ್​ ಲ್ಯಾಬ್​ಗಳನ್ನು ತೆರೆಯಲಾಗಿದೆ. ಎಲ್ಲ ಸರ್ಕಾರಿ ಔಷಧ ಕೇಂದ್ರಗಳಲ್ಲಿ ಕರೊನಾ ಸೇರಿ ಇತರ ಔಷಧಗಳು ಲಭ್ಯವಿದೆ ಎಂದು ತಿಳಿಸಿದರು.

ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಆರೋಗ್ಯ ಮೇಳಗಳನ್ನು ಯಶಸ್ವಿಯಾಗಿ ನಡೆಸಲಾಗಿದ್ದು, ಜನರ ಆರೋಗ್ಯ ತಪಾಸಣೆ ನಡೆಸಲಾಗಿದೆ. ಆರೋಗ್ಯ ಮೇಳಗಳಲ್ಲಿ 7ಲಕ್ಷಕ್ಕೂ ಅಧಿಕ ಜನರಿಗೆ ಆರೋಗ್ಯ ಕಾರ್ಡ್​ ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು.

15 ರಿಂದ ಶಾಲೆ ಆರಂಭ: ಮೇ 15 ರಿಂದ ರಾಜ್ಯಾದ್ಯಂತ ಶಾಲೆಗಳು ಮರು ಆರಂಭಗೊಳ್ಳುತ್ತಿದ್ದು, ಜಿಲ್ಲೆಯಲ್ಲಿ ಲಸಿಕಾಕರಣವಾಗದಿರುವ ಮಕ್ಕಳಿಗೆ ಲಸಿಕೆ ಹಾಕಿಸಲು ಕ್ರಮಕೈಗೊಳ್ಳಬೇಕು ಎಂದು ಸಚಿವ ಜ್ಞಾನೇಂದ್ರ ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ವೈ.ಎಸ್​.ಪಾಟೀಲ, ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ರಾಹುಲ್​ ಕುಮಾರ್​ ಶಹಪೂರ ವಾಡ್​, ಜಿಪಂ ಸಿಇಒ ಡಾ.ಕೆ. ವಿದ್ಯಾಕುಮಾರಿ, ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ, ಎಸಿ ವಿ.ಅಜಯ್​, ಪಾಲಿಕೆ ಆಯುಕ್ತೆ ರೇಣುಕಾ ಸೇರಿ ಇತರ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲಾಸ್ಪತ್ರೆಯಲ್ಲಿ ನೂತನವಾಗಿ ಪ್ರಾರಂಭವಾಗುತ್ತಿರುವ 100 ಹಾಸಿಗೆಗಳ ತಾಯಿ&ಮಕ್ಕಳ ಆಸ್ಪತ್ರೆ, ಟ್ರಾಮಾಕೇರ್​ ಸೆಂಟರ್​, ಕ್ಯಾನ್ಸರ್​ ಕೇಂದ್ರ ಹಾಗೂ 10 ಹಾಸಿಗೆಗಳುಳ್ಳ ಪೌಷ್ಟಿಕ ಪುನಶ್ಚೇತನ ಕೇಂದ್ರಗಳಿಗೆ ಅಗತ್ಯ ಸಿಬ್ಬಂದಿ ನೇಮಕಕ್ಕೆ ಆರೋಗ್ಯ ಇಲಾಖೆ ಕ್ರಮ ಕೈಗೊಳ್ಳಬೇಕು. > ಆರಗ ಜ್ಞಾನೇಂದ್ರ, ಸಚಿವ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net