

ದಾವಣಗೆರೆ: ಮಹಿಳೆಯರು ಮತ್ತು ಮಕ್ಕಳ ಕಳ್ಳ ಸಾಗಣೆ ತಡೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಸರ್ಕಾರದ ಕಣ್ಣು ಮತ್ತು ಕಿವಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ.ವೆಂಕಟೇಶ್ ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತಿತರ ಸಂಸ್ಥೆಗಳ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಮಾನವ ಕಳ್ಳ ಸಾಗಣೆ ತಡೆ ಕುರಿತ ಜಾಗೃತಿ ಕಾರ್ಯಾಗಾರದಲ್ಲಿ ಮಾತನಾಡಿದರು.
ಮಾನವ ಕಳ್ಳ ಸಾಗಣೆ ಎಂಬುದು ಅನಾದಿಕಾಲದಿಂದ ನಡೆದುಬಂದಿದೆ. ಮಹಿಳೆಯರು ಮತ್ತು ಮಕ್ಕಳು ಹೆಚ್ಚಾಗಿ ಇದಕ್ಕೆ ಬಲಿಯಾಗುತ್ತಿದ್ದು, ಇದು ಇಡೀ ವಿಶ್ವದ ಸಮಸ್ಯೆಯಾಗಿದೆ. ನಾಗರಿಕರು ಹಾಗೂ ಇಲಾಖೆಗಳು ಕ್ರಿಯಾಶೀಲ ಕೆಲಸ ನಿರ್ವಹಿಸಿದಾಗ ಇದಕ್ಕೆ ಬ್ರೇಕ್ ಹಾಕಬಹುದು ಎಂದು ತಿಳಿಸಿದರು.
ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ಸರ್ಕಾರದಡಿ ಅನೇಕ ಇಲಾಖೆಗಳು ಕಾರ್ಯನಿರ್ವಹಿಸುತ್ತಿವೆ. ಸ್ವಾಧಾರ ಕೇಂದ್ರಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕಣ್ಗಾವಲು ಸಮಿತಿ ರಚಿಸಲಾಗಿದೆ ಎಂದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷೆ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ಮಾತನಾಡಿ, ಸಮಾಜದ ಯಾವೊಬ್ಬ ವ್ಯಕ್ತಿ ಸಂವಿಧಾನದಲ್ಲಿರುವ ಹಕ್ಕು, ಸ್ವಾತಂತ್ರ್ಯಗಳಿಂದ ವಂಚಿತರಾಗಬಾರದು ಎಂಬ ಮುಖ್ಯ ಉದ್ದೇಶದಿಂದ ವಿಶ್ವ ಸಂಸ್ಥೆ 2013ರ ಜೂನ್ 30ರಂದು ಮಾನವ ಕಳ್ಳ ಸಾಗಣೆ ತಡೆ ದಿನವನ್ನಾಗಿ ಆಚರಿಸಲು ಕರೆ ನೀಡಿತು ಎಂದರು.
ರಾಜ್ಯದಲ್ಲಿ ಕಳೆದ 5 ವರ್ಷಗಳಲ್ಲಿ ಕಾಣೆಯಾದ ಬಾಲಕ, ಬಾಲಕಿಯರಲ್ಲಿ 21,187 ಮಕ್ಕಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ಕಾನೂನು ಸೇವಾ ಪ್ರಾಧಿಕಾರ ಮತ್ತಿತರ ಇಲಾಖೆಗಳ ಸಹಯೋಗದೊಂದಿಗೆ ರಕ್ಷಿಸಲಾಗಿದೆ. ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ಸಂವಿಧಾನದಲ್ಲಿ ಹಲವು ಕಾನೂನುಗಳಿದ್ದು, ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಅವಕಾಶವಿದೆ. ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಹಿರಿಯ ಸಿವಿಲ್ ನ್ಯಾಯಾಧೀಶ ಮಹಾವೀರ್ ಎಂ. ಕರೆಣ್ಣವರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗರಾಜ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರಾಮಾನಾಯ್ಕ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್.ಅರುಣ್ಕುಮಾರ್, ಮಹಿಳಾ ಮತ್ತು ಮಕ್ಕಳ ಇಲಾಖೆ ಉಪನಿರ್ದೇಶಕಿ ವಾಸಂತಿ ಉಪ್ಪಾರ್ ಇತರರಿದ್ದರು.