

ಬಳ್ಳಾರಿ : ರಾಜ್ಯ ಮತ್ತು ಕೇಂದ್ರ ವಲಯ ವಿವಿಧ ಯೋಜನೆಗಳಡಿ ಪ್ರಸಕ್ತ ವರ್ಷಕ್ಕಾಗಿ ಹಂಚಿಕೆಯಾದ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ವ್ಯಯಿಸಬೇಕು ಎಂದು ಡಿಸಿ ಪ್ರಶಾಂತ ಕುಮಾರ ಮಿಶ್ರಾ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಸೋಮವಾರ ನಡೆದ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಕಾರ್ಯಕ್ರಮಗಳ ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ಕೃಷಿ ಇಲಾಖೆ, ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯನ್ನೊಳಗೊಂಡಂತೆ ಹಲವು ಇಲಾಖೆಗಳು ನಿಗದಿತ ಗುರಿ ಸಾಧಿಸಿಬೇಕು. ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಕಲ್ಯಾಣ ಕಾರ್ಯಕ್ರಮಗಳಿಗೆ ನಿಗದಿಪಡಿಸಿರುವ ಅನುದಾನಕ್ಕೆ ಸಂಬಂಧಿಸಿದಂತೆ ಸಂಪೂರ್ಣ ಕ್ರಿಯಾಯೋಜನೆಯನ್ನು ಸಿದ್ದಪಡಿಸಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಬೇಕು ಎಂದರು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಮಾತನಾಡಿ, ಈ ಸಾಲಿನ ಎಸ್‌ಸಿಎಸ್‌ಪಿ ಯೋಜನೆಯಡಿ ಜುಲೈ ಅಂತ್ಯದವರೆಗೆ ವಿವಿಧ ಇಲಾಖೆಗಳಡಿ ಒಟ್ಟಾರೆ 7 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಈ ಪೈಕಿ 5.28 ಕೋಟಿ ರೂ. ಖರ್ಚಾಗಿದ್ದು, ಶೇ.79ರಷ್ಟು ಪ್ರಗತಿಯಾಗಿದೆ. ಅದೇ ರೀತಿ ಟಿಎಸ್‌ಪಿ ಯೋಜನೆಯಡಿ ವಿವಿಧ ಇಲಾಖೆಗಳಡಿ 8.20 ಕೋಟಿ ರೂ. ಬಿಡುಗಡೆಯಾಗಿದ್ದು, ಆ ಪೈಕಿ 7.31 ಕೋಟಿ ರೂ. ವ್ಯಯಿಸಿದ್ದು, ಶೇ.92ರಷ್ಟು ಪ್ರಗತಿಯಾಗಿದೆ ಎಂದು ಸಭೆಗೆ ತಿಳಿಸಿದರು.