

ಬೀದರ್: ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗೆ ಅನ್ಯ ಇಲಾಖೆ ಅಧಿಕಾರಿಗಳನ್ನು ನೇಮಕ ಮಾಡುತ್ತಿರುವುದಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ನಗರದಲ್ಲಿ ಗುರುವಾರ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ವಿಜಯಕುಮಾರ ಮಡ್ಡೆ ಅವರಿಗೆ ಸಲ್ಲಿಸಿದರು. ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಾಶ್ ಅವರನ್ನು ಗುತ್ತಿಗೆ ಆಧಾರದ ಮೇಲೆ ಹೂವಿನಹಡಗಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಿರುವುದನ್ನು ಕೂಡಲೇ ರದ್ದುಪಡಿಸಬೇಕು. ರಾಜ್ಯದ ವಿವಿಧೆಡೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಯಲ್ಲಿ ನೇಮಕ ಮಾಡಿಕೊಳ್ಳಲಾದ ಅನ್ಯ ಇಲಾಖೆ ಅಧಿಕಾರಿಗಳನ್ನು ಬಿಡುಗಡೆಗೊಳಿಸಿ, ಮಾತೃ ಇಲಾಖೆಗೆ ಕಳುಹಿಸಬೇಕು. ಮುಂದೆ ಯಾವ ಹಂತದಲ್ಲಿಯೂ ಅನ್ಯ ಇಲಾಖೆಯವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಗೆ ನೇಮಕ ಮಾಡಬಾರದು ಎಂದು ಒತ್ತಾಯಿಸಿದರು.
ಜಿಪಂ ಸಹಾಯಕ ಕಾರ್ಯದರ್ಶಿ ವೈಜಣ್ಣ ಫುಲೆ, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮಾಣಿಕರಾವ್ ಪಾಟೀಲ, ಬೀರೇಂದ್ರಸಿಂಗ್ ಠಾಕೂರ್, ಹಣಮಂತರಾಯ ಕೌಟಗೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶಿವಕುಮಾರ ಘಾಟೆ, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಹಾಗೂ ಸಿಬ್ಬಂದಿ ಇದ್ದರು.