ಅಪಘಾತ ತಡೆಗೆ ಅಗತ್ಯ ರಸ್ತೆ ಸುರಕ್ಷತಾ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಪಘಾತ ತಡೆಗೆ ಅಗತ್ಯ ರಸ್ತೆ ಸುರಕ್ಷತಾ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
Published on

ಹಾಸನ: ಜಿಲ್ಲೆಯಲ್ಲಿ ಅಪಘಾತಗಳನ್ನು ತಡೆಯಲು ಅಗತ್ಯವಿರುವ ಕಡೆಯಗಳಲ್ಲಿ ವೈಜ್ಞಾನಿಕವಾಗಿ ರಸ್ತೆಹುಬ್ಬು ನಿರ್ಮಾಣ, ಗುಣಮಟ್ಟದ ಹೈ ಮಾಸ್ಟ್ ದೀಪಗಳು, ರಿಫ್ಲೆಕ್ಟರ್, ಬ್ಲಿಂಕಿಂಗ್ ಲೈಟ್ಸ್ ಹಾಗೂ ಸೈನ್ ಬೋರ್ಡ್ ಅಳವಡಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಯ ಅಧ್ಯಕ್ಷರಾದ ಎಂ.ಎಸ್. ಅರ್ಚನಾ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಗೆ ಅಗತ್ಯವಿರುವ ಅನುದಾನಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರರಿಗೆ ನಿರ್ದೇಶನ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಮಾತನಾಡಿ, ಜಿಲ್ಲೆಯ ಎಲ್ಲಾ ನಗರ ಮತ್ತು ಪುರಸಭೆಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸುಗಮ ರಸ್ತೆ ಸಂಚಾರಕ್ಕೆ ಅಗತ್ಯವಿರುವ ಕಡೆಗಳಲ್ಲಿ ವೈಜ್ಞಾನಿಕ ರಿಫ್ಲೆಕ್ಟರ್, ಬ್ಲಿಂಕಿಂಗ್ ಲೈಟ್ಸ್, ಸೈನ್ ಬೋಡ್ ಅಳವಡಿಸಬೇಕು. ರಾಜೀವ್ ಇಂಜಿನಿಯಂರಿಗ್ ಕಾಲೇಜು ಹತ್ತಿರದ ಬೈಪಾಸ್‌ನಲ್ಲಿ ಕೈಗಾರಿಕಾ ಪ್ರದೇಶದ ಕಡೆಗೆ ತಿರುಗುವಾಗ ಅಪಘಾತಗಳು ಸಂಭವಿಸುತ್ತಿದ್ದು ಕೂಡಲೇ ಸಿಗ್ನಲ್ ಬೋರ್ಡ್ ಹಾಕುವಂತೆ ಹಾಗೂ ಹೈ ವೇಯನ್ನು ಸೇರುವ ರಸ್ತೆ ಸ್ಪೀಡ್ ಬ್ರೇಕರ್ ಹಂಪ್ಸ್ ನಿರ್ಮಿಸಲು ತಿಳಿಸಿದರು.

ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರರಾದ ಮಂಜು, ಪ್ರಾದೇಶಿಕ ಸಾರಿಗೆ ಅಧಿಕಾರಿ ಎಲ್.ಮಲ್ಲೇಶ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ, ನಗರಸಭೆ ಪೌರಾಯುಕ್ತ ಸತೀಶ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಹಾಲಿಂಗಯ್ಯ, ಜಿಲ್ಲಾ ನೌಕರರ ಸಂಘದ ಅಧ್ಯಕ್ಷರಾದ ಈ.ಕೃಷ್ಣೇಗೌಡ ಹಾಗೂ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net